ಮಡಿಕೇರಿ: ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಗಾಂಧೀಜಿ ಹುತಾತ್ಮ ದಿನವನ್ನು ಮಡಿಕೇರಿ ನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವವನ್ನು ಅರ್ಪಿಸಲಾಗಿದೆ. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್, ಗೈಡ್ಸ್, ಎನ್‍ಸಿಸಿ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಯಲ್ಲಿ ಗಾಂಧೀಜಿ ಹುತಾತ್ಮ ದಿನವನ್ನು ಆಚರಿಸಲಾಯಿತು.
Advertisement
Advertisement
ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯರಸ್ತೆ ಮೂಲಕ ಗಾಂಧೀಜಿ ಚಿತಾಭಸ್ಮವನ್ನು ತೆಗೆದುಕೊಂಡು ಹೋಗಿದ್ದು, ಗಾಂಧಿ ಮಂಟಪದಲ್ಲಿರಿಸಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತನಿಗೆ ಪೊಲೀಸ್ ಗೌರವ ಸಲ್ಲಿಸಲಾಯಿತು.
Advertisement
ಗಾಂಧಿಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು. ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು. ಜಿಲ್ಲಾಧಿಕಾರಿ ಅನಿಸ್ ಜಾಯ್, ಮಾಜಿ ಸಚಿವ ಎಂ.ಸಿ.ನಾಣಯ್ಯ ಮತ್ತು ಜಿಲ್ಲೆಯ ವಿವಿಧ ಇಲಾಖೆ ಅದಿಕಾರಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.