ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಗೇವಾಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ.
ಮೂಲತಃ ತೆಲಂಗಾಣ ರಾಜ್ಯದ 19 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಹುಕ್ಕೇರಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ 7 ಜನರನ್ನು ಮಹಾರಾಷ್ಟ್ರದ ಗಡಹಿಂಗ್ಲಜ್ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ತೆಲಂಗಾಣ ರಾಜ್ಯದ ನಿಜಾಯಮಾಬಾದ್ ಜಿಲ್ಲೆಯ ಬೋಧನ ಗ್ರಾಮದ 19 ಮಂದಿ ಪ್ರವಾಸಕ್ಕೆ ತೆರಳಿದ್ದರು. ಮಹಾರಾಷ್ಟ್ರದ ಪಂಡಾರಪುರ ವಿಠಲ್ ದೇವರ ದರ್ಶನ ಮಾಡಿಕೊಂಡು ನಂತರ ಗೋಕರ್ಣಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬಾಗೇವಾಡಿ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ.
ಈ ಘಟನೆ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.