ಚಿಕ್ಕಮಗಳೂರು: ತುಮಕೂರಿನಲ್ಲಿ ತೆಂಗು- ಅಡಿಕೆ ಮರಗಳ ಹನನ ಪ್ರಕರಣದ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಲ್ಲಿ ಪಿಐಎಲ್ ಸಲ್ಲಿಸಲು ರಾಜ್ಯ ಕಿಸಾನ್ ಕಾಂಗ್ರೆಸ್ ತೀರ್ಮಾನಿಸಿದೆ.
ಮಾ.18ರಂದು ವಕೀಲ ಗೋಪಾಲ್ ಸಿಂಗ್ ಮೂಲಕ ಸುಪ್ರೀಂ ಕೋರ್ಟ್ ಅನುಮತಿ ಪಡೆದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಲ್ಲಿ ಪಿಐಎಲ್ ಸಲ್ಲಿಸಲು ರಾಜ್ಯ ಕಿಸಾನ್ ಕಾಂಗ್ರೆಸ್ ತೀರ್ಮಾನಿಸಿದೆ.
ಯಾವುದೇ ನ್ಯಾಯಾಲಯ ಮರಗಳನ್ನು ಕಡಿದು ಹಾಕುವಂತೆ ನಿರ್ದೇಶನ ಮಾಡಿಲ್ಲ. ಈ ಮಧ್ಯೆಯೂ ಮಕ್ಕಳಂತೆ ಸಾಕಿದ ಮರಗಳನ್ನು ಕಡಿದ ಹಾಗೂ ಕಡಿಯಲು ಪರೋಕ್ಷವಾಗಿ ಕಾರಣರಾದ ವ್ಯಕ್ತಿಗಳ ಮೇಲೆ ದೂರು ದಾಖಲಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ತುಮಕೂರು ಜಿಲ್ಲಾಧಿಕಾರಿ, ಗುಬ್ಬಿ ತಹಸಿಲ್ದಾರ್, ಗ್ರಾಮ ಲೆಕ್ಕಿಗನ ವಿರುದ್ಧ ದೂರು ದಾಖಲು ಮಾಡಲು ಕಾಂಗ್ರೆಸ್ ಕಿಸಾನ್ ಘಟಕ ನಿರ್ಧರಿಸಿದೆ. ನೊಂದ ರೈತರಿಗೆ ನ್ಯಾಯ ಒದಗಿಸಲು ಕಿಸಾನ್ ಕಾಂಗ್ರೆಸ್ ಬದ್ಧವಾಗಿದೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಹೇಳಿದ್ದಾರೆ.
ಸುಮಾರು 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟವನ್ನು ಏಕಾಏಕಿ ಉರುಳಿಸಿ ತಹಶೀಲ್ದಾರ್ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಹಶೀಲ್ದಾರ್ ಮಮತಾ ಅವರ ಮೇಲೆ ಆರೋಪ ಕೇಳಿ ಬಂದಿದ್ದು, ತಾಲೂಕಿನ ತಿಪ್ಪೂರು ಗ್ರಾಮದ ಸಣ್ಣಕೆಂಪಯ್ಯ ಮತ್ತು ಸಿದ್ದಮ್ಮ ಅವರ ತೋಟವನ್ನು ನಾಶ ಮಾಡಲಾಗಿದೆ. ಉಡುಸಲಮ್ಮ ದೇವಸ್ಥಾನದಿಂದ ಕೊಡುಗೆಯಾಗಿ 5.18 ಎಕರೆ ಜಮೀನನ್ನು ಈ ಕುಟುಂಬಕ್ಕೆ ನೀಡಲಾಗಿದೆ. ಕಳೆದ 30 ವರ್ಷಗಳಿಂದಲೂ ತೆಂಗು, ಅಡಿಕೆ, ಬಾಳೆ ಬೆಳೆದುಕೊಂಡು ಬಂದಿದ್ದಾರೆ. ಈ ನಡುವೆ ಉಡುಸಲಮ್ಮ ದೇವರ ಜಾತ್ರೆಗೆ ಜಾಗ ಸಾಕಾಗುವುದಿಲ್ಲ ಎಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ತಹಶಿಲ್ದಾರ್ ಮಮತಾ ಅವರು ತೋಟವನ್ನು ಉರುಳಿಸಲು ಆದೇಶ ಕೊಟ್ಟಿದ್ದಾರೆ ಎನ್ನಲಾಗಿದೆ.
ಅದರಂತೆ ಗ್ರಾಮ ಲೆಕ್ಕಿಗ ಮುರುಳಿ ಯಾವುದೇ ನೋಟಿಸ್ ನೀಡದೇ ಏಕಾಏಕಿ ತೋಟಕ್ಕೆ ನುಗ್ಗಿ ಫಸಲಿಗೆ ಬಂದಿದ್ದ 300 ಅಡಿಕೆ, 30 ತೆಂಗು ಮತ್ತು ಬಾಳೆ ಗಿಡಗಳನ್ನು ಉರುಳಿಸಿದ್ದಾರೆ. ಸಣ್ಣ ಕೆಂಪಯ್ಯ ಮತ್ತು ಸಿದ್ದಮ್ಮ ಕುಟುಂಬ ಉಡುಸಲಮ್ಮ ದೇವಸ್ಥಾನದ ಅರ್ಚಕರಾಗಿದ್ದಾರೆ. ಹೀಗಾಗಿ ಈ ಕುಟುಂಬಕ್ಕೆ ದೇವಸ್ಥಾನದಿಂದಲೇ ಜಮೀನು ಕೊಡುಗೆಯಾಗಿ ಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಜಮೀನು ಪೂರ್ಣ ಸ್ವಾಧೀನ ಕೋರಿ ಜಿಲ್ಲಾ ನ್ಯಾಯಾಲಯದಲ್ಲಿ ಮುನಿ ಕೆಂಪಯ್ಯ ಕುಟುಂಬ ಅರ್ಜಿ ಸಲ್ಲಿಸಿತ್ತು. ಆದರೆ ಅಧಿಕಾರಿಗಳು ಏಕಾಏಕಿ ಗಿಡಗಳನ್ನು ನಾಶ ಮಾಡಿದ್ದಾರೆ.
ಗುಬ್ಬಿ ಪೊಲೀಸರ ಸಮುಖದಲ್ಲೇ ಗ್ರಾಮ ಲೆಕ್ಕಿಗ ಮುರುಳಿ ಮರಗಳನ್ನು ಕಡಿದಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಕುಟುಂಬ ದುಃಖದ ಮಡುವಿನಲ್ಲಿದೆ. ಮುನಿ ಕೆಂಪಯ್ಯ ಕುಟುಂಬದ ಆಕ್ರಂದನದ ವಿಡಿಯೋ ವೈರಲ್ ಆಗಿದೆ.