ಜೈಪುರ್: ಮಹಿಳೆಯೊಬ್ಬರಿಗೆ (Woman) ಆಕೆಯ ಪತಿ ಹಾಗೂ ಕುಟುಂಬಸ್ಥರು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ (Rajasthan) ಪ್ರತಾಪ್‍ಗಢ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯ ಪತಿ ಮಹಿಳೆಯನ್ನು ವಿವಸ್ತ್ರಗೊಳಿಸುತ್ತಿರುವುದು ಹಾಗೂ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ. ಈ ವೇಳೆ ಆಕೆ ಸಹಾಯಕ್ಕಾಗಿ ಕಿರುಚಾಡಿದ್ದಾಳೆ.
ಮಹಿಳೆ ಮನೆ ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಮಹಿಳೆಯ ಪತಿ ಆಕೆಯನ್ನು ಅಪಹರಿಸಿಕೊಂಡು ಬಂದಿದ್ದ. ಬಳಿಕ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ. ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಈ ಘಟನೆಯನ್ನು ಖಂಡಿಸಿದ್ದಾರೆ. ಅಪರಾಧ ವಿಭಾಗದ ಎಡಿಜಿ ಅವರನ್ನು ಸ್ಥಳಕ್ಕೆ ಕಳುಹಿಸಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸುಸಂಸ್ಕೃತ ಸಮಾಜದಲ್ಲಿ ಇಂತಹವರಿಗೆ ಜಾಗವಿಲ್ಲ. ಆದಷ್ಟು ಬೇಗ ಈ ಕೃತ್ಯ ಎಸಗಿದವರನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಲಾಗುವುದು. ಆದಷ್ಟು ಬೇಗ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ.
Web Stories