ನವದೆಹಲಿ: ರಫೇಲ್ ಡೀಲ್ ಪ್ರಕರಣದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಚೌಕಿದರ್ ಚೋರ್ ಹೈ’ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿ ಅವರು, ರಫೇಲ್ ಡೀಲ್ ಪ್ರಕರಣದ ತೀರ್ಪಿನಲ್ಲಿ ಇಲ್ಲದೆ ಇರುವ ಅಂಶಗಳನ್ನು ಉಲ್ಲೇಖಿಸಿ ಟೀಕೆ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ.
Advertisement
Advertisement
ರಫೇಲ್ ತೀರ್ಪಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಬಾರದು ಎಂದು ಕೇಂದ್ರದ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಆದೇಶ ಬಂದ ನಂತರ ಚೌಕಿದಾರ್ (ಪ್ರಧಾನಿ ಮೋದಿ) ಕಳ್ಳತನ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ರಾಹುಲ್ ಗಾಂಧಿ ಅವರು ಕಳೆದ ವಾರ ಹೇಳಿದ್ದರು.
Advertisement
ಈ ಸಂಬಂಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಸುಪ್ರೀಂ ಕೋರ್ಟ್ ಗೆ ನ್ಯಾಯಾಂಗ ನಿಂದನೆ ದೂರು ನೀಡಿದ್ದರು. ಮೀನಾಕ್ಷಿ ಲೇಖಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.
Advertisement
ಕೋರ್ಟ್ ಹೇಳಿದೆ ಎಂದು ರಾಹುಲ್ ಗಾಂಧಿ ಅವರು ಉಲ್ಲೇಖಿಸಿ ನೀಡಿರುವ ಹೇಳಿಕೆ ಗಮನಕ್ಕೆ ಬಂದಿದೆ. ಕಾನೂನುಬದ್ಧವಾಗಿ ಪಡೆಯದ ದಾಖಲೆಗಳನ್ನು ಉಲ್ಲೇಖಿಸಿ ರಾಹುಲ್ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅಟಾರ್ನಿ ಜನರಲ್ ಕೋರ್ಟಿನ ಗಮನಕ್ಕೆ ತಂದಿದ್ದಾರೆ ಎಂದು ಸುಪ್ರಿಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ತಿಳಿಸಿದರು.
ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ಕೇಳಬೇಕಾಗುತ್ತದೆ. ಹೀಗಾಗಿ ಅವರು ಮುಂದಿನ ಸೋಮವಾರ ಒಳಗಾಗಿ ಉತ್ತರ ನೀಡಬೇಕೆಂದು ಕೋರ್ಟ್ ಸೂಚಿಸಿದೆ.ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿದೆ.