ನವದೆಹಲಿ: ಫುಟ್‌ಪಾತ್ (Footpath) ಮೇಲೆ ಮಲಗಿದ್ದ ಐವರ ಮೇಲೆ ಟ್ರಕ್‌ವೊಂದು (Truck) ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದೆಹಲಿಯ (New Delhi) ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಸೋಮವಾರ ನಡೆದಿದೆ.
ಮುಂಜಾನೆ 5:30ರ ವೇಳೆಗೆ ಘಟನೆ ಸಂಭವಿಸಿದೆ. ಮನೆ, ಆಶ್ರಯವಿಲ್ಲದ ಐವರು ಫುಟ್‌ಪಾತ್ ಮೇಲೆ ಮಲಗಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಟ್ರಕ್ ಹರಿದಿದೆ. ತಕ್ಷಣವೇ ಎಲ್ಲರನ್ನೂ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಶಾಸ್ತ್ರಿ ಪಾರ್ಕ್ ಕೊಳೆಗೇರಿ ನಿವಾಸಿ ಮುಸ್ತಾಕ್ (35), ಗಾಂಧಿನಗರ ನಿವಾಸಿ ಕಮಲೇಶ್ (36) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೀಬೋರ್ಡ್‌ನಲ್ಲಿ ಡಾಲರ್ ಬದಲು ರೂಪಿ ಚಿಹ್ನೆ ಯಾಕಿಲ್ಲ – ಓಲಾ ಸಿಇಒ ಪ್ರಶ್ನೆ
ಅಪಘಾತದ ಬಳಿಕ ಟ್ರಕ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ, ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಅದರ ದಾಖಲೆಗಳ ಮೂಲಕ ಮಾಲೀಕರನ್ನು ಸಂಪರ್ಕಿಸುತ್ತಿದ್ದಾರೆ. ಚಾಲಕ ನಿದ್ರಿಸಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಮೃತರ ಗುರುತನ್ನು ಪತ್ತೆ ಹಚ್ಚುವ ಸಲುವಾಗಿ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪಘಾತದ ಕಾರಣದ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಸಮೀಪದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ನಿರ್ಲಕ್ಷ್ಯದ ಚಾಲನೆಯಿಂದ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ: ಶೀಘ್ರವೇ ದರ್ಶನ್ ಬೇರೆ ಜೈಲಿಗೆ ಶಿಫ್ಟ್?