ತುಮಕೂರು: ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ರೇಷನ್ ಪೂರೈಕೆ ಮಾಡುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದರು.
ಖಾದರ್ ಆರೋಪ ಏನು?:
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಚಿವ ಯು.ಟಿ.ಖಾದರ್ ಅವರು, ಸಿದ್ದಗಂಗಾ ಮಠದ ಒಟ್ಟು 7,359 ವಿದ್ಯಾರ್ಥಿಗಳಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ 73,590 ಕೆಜಿ ಅಕ್ಕಿ ಹಾಗೂ 36,795 ಕೆಜಿ ಗೋಧಿ ವಿತರಣೆ ಮಾಡುತ್ತಿತ್ತು. ದಾಸೋಹ ಯೋಜನೆ ಅಡಿ ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೂ ಅಕ್ಕಿ, ಗೋಧಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರವು ಕಳೆದ ಮೂರು ತಿಂಗಳಿಂದ ಮಠಕ್ಕೆ ನೀಡುತ್ತಿದ್ದ ಅಕ್ಕಿಯನ್ನು ತಡೆ ಹಿಡಿದಿದೆ ಎಂದು ಆರೋಪಿಸಿದ್ದರು. ಜೊತೆಗೆ ಪ್ರಮುಖ ದಾಖಲೆ ಬಿಡುಗಡೆ ಮಾಡಿದ್ದರು.
ತುಮಕೂರು ಸಿದ್ದಗಂಗಾ ಮಠದಲ್ಲಿ ಸಾಕಷ್ಟು ಜನರು ವಸತಿ ಪಡೆದು ಶಿಕ್ಷಣ ಪಡೆಯುತ್ತಿದ್ದಾರೆ. ಹೀಗಾಗಿ ಅಂತಹ ಶಿಕ್ಷಣ ಸಂಸ್ಥೆಗಳಿಗೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಿವಿಧ ಸಂಘಗಳ ಸಹಭಾಗಿತ್ವದಲ್ಲಿ ಅಕ್ಕಿ, ಗೋಧಿ ವಿತರಿಸುತ್ತಿತ್ತು. ಇದರಿಂದ ಸಂಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಏಕಾಏಕಿ ಸಿದ್ದಗಂಗಾ ಮಠ ಹಾಗೂ ವಿವಿಧ ಸಂಸ್ಥೆಗಳಿಗೆ ವಿತರಿಸುತ್ತಿದ್ದ ಅಕ್ಕಿ ಹಾಗೂ ಗೋಧಿಯನ್ನು ನಿಲ್ಲಿಸಿದೆ ಎಂದು ದೂರಿದ್ದರು.