ದಾವಣಗೆರೆ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿ ನಡೆದಿದೆ.
ಚಂದ್ರಶೇಖರ (34) ಮತ್ತು ಸಂತೋಷಿ (24) ಮೃತ ದುರ್ದೈವಿಗಳು. ಚಂದ್ರಶೇಖರ ನಿರೂಪಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಈ ಘಟನೆ ಹನಗವಾಡಿ ಗ್ರಾಮದ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರು ಕಿರುತೆರೆ ಕಲಾವಿದರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದರು. ಈ ವೇಳೆ ಹನಗವಾಡಿ ಗ್ರಾಮದ ಸೇತುವೆ ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಕಾರು ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಚಂದ್ರಶೇಖರ ಮತ್ತು ಸಂತೋಷಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇನ್ನು ಈ ಅಪಾಘತದಿಂದ ರಾಮು ಮತ್ತು ಸುನೀತಾಗೆ ಗಂಭೀರ ಗಾಯವಾಗಿದೆ. ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಈ ಘಟನೆ ಕುರಿತು ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.