ಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆ ಸೇರಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಅಪೋಲೋ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ನಗರ ಹೊರವಲಯದ ಎಸ್‍ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹನುಮೇಶ್ (22) ಹಾಗೂ ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯ ಎಂಜಿ ಬೇಕರಿ ಮಾಲೀಕ ಪುನೀತ್ (23) ಮೃತ ದುರ್ದೈವಿಗಳು. ಅಪಘಾತದಲ್ಲಿ ಎಸ್‍ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಯಶ್ವಂತ್ ಹಾಗೂ ನಂದೀಶ್ ಗಾಯಗೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ನಂದೀಶ್ ಬರ್ತ್ ಡೇ ಪ್ರಯುಕ್ತ ನಂದಿ ಕ್ರಾಸ್‍ಗೆ ನಾಲ್ವರು ಯುವಕರು ಪುನೀತ್ ಸ್ವಿಫ್ಟ್ ಕಾರಿನಲ್ಲಿ ಹೋಗಿದ್ದರು. ನಂತರ ಪಾರ್ಟಿ ಮುಗಿಸಿ ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್‍ಐ ಚೇತನ್ ಹಾಗೂ ಸಂಚಾರಿ ಠಾಣಾ ಪಿಎಸ್‍ಐ ಬಂದು ಮೃತದೇಹಗಳನ್ನ ಶವಾಗಾರಕ್ಕೆ ರವಾನಿಸಿದ್ದಾರೆ. ಜೊತೆಗೆ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.