Friday, 13th December 2019

ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣ – ಭಾನುವಾರ ಬಂದರುಗಳು ಬಂದ್!

ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 7 ಮಂದಿ ಮೀನುಗಾರರು ನಾಪತ್ತೆಯಾಗಿ 20 ದಿನಗಳು ಕಳೆದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸದ್ಯ ಕರಾವಳಿಯ ಮೀನುಗಾರರು ಅನಾಥರಾಗಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಾವು ನಿರ್ಧರಿಸಿದ್ದೇವೆ ಎಂದು ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಡಿಸೆಂಬರ್ 13ರಿಂದ ಈವರೆಗೆ ನಾಪತ್ತೆಯಾದ ಮೀನುಗಾರರು ಮತ್ತು ಬೋಟನ್ನು ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಗೋವಾ ಮತ್ತು ಮಹಾರಾಷ್ಟ್ರ ಸಮುದ್ರದ ಗಡಿಯಲ್ಲಿ ಮೀನುಗಾರರು ಕಣ್ಮರೆಯಾಗಿರುವ ವಿಚಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ಬಂದರೂ ಈವರೆಗೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. 7 ಮಂದಿ ಕಡಲ ಮಕ್ಕಳು ಏನಾದರು ಎನ್ನುವುದು ಇನ್ನು ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಸರ್ಕಾರಗಳ ವಿರುದ್ಧ ಜನವರಿ 6 ರಂದು ಕಡಲ ಮಕ್ಕಳು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂದರು.

ಪ್ರತಿಭಟನೆ ಭಾಗವಾಗಿ ಮಲ್ಪೆಯಿಂದ ಉಡುಪಿಯ ಕರಾವಳಿ ಬೈಪಾಸ್ ವರೆಗೆ ಪಾದಯಾತ್ರೆ ಮಾಡಲಾಗುವುದು. ಈ ಪ್ರತಿಭಟನೆಯಲ್ಲಿ ಸುಮಾರು 50 ಸಾವಿರ ಮಂದಿ ಮೀನುಗಾರರು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ರಸ್ತೆಗಿಳಿಯಲಿದ್ದು ಹೆದ್ದಾರಿ ಬಂದ್ ಮಾಡಲಿದ್ದಾರೆ. ಇದನ್ನು ಓದಿ: ಕಸುಬಿಗಾಗಿ ಕಡಲಿಗಿಳಿದವರು 17 ದಿನದಿಂದ ಕಣ್ಮರೆ- ಇದು ಮಿಸ್ಸಿಂಗ್ ಸೆವೆನ್ ಮಿಸ್ಟರಿ

ಘಟನೆ ನಡೆದು ತಿಂಗಳಾದರೂ ಸಿಎಂ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಈ ಕುರಿತು ಒಂದೇ ಒಂದು ಹೇಳಿಕೆ ನೀಡದಿರುವುದು ಕರಾವಳಿಯ ಪ್ರಬಲ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರ ಮೂರೂ ಜಿಲ್ಲೆಯ ಬಂದರುಗಳನ್ನು ಬಂದ್ ಮಾಡುವ ಎಚ್ಚರಿಕೆಯನ್ನೂ ಮೀನುಗಾರ ಮುಖಂಡರು ಕೊಟ್ಟಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *