ಉಡುಪಿ: ಎಡೆಬಿಡದೆ ಮಳೆಯಾಗುತ್ತಿದ್ದು, ಐದು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ಕೃತಕ ನೆರೆ ಸಂಭವಿಸಿದೆ.
ಐದು ದಿನಗಳಿಂದ ನಿರಂತರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕಾಲುವೆ ಸಮೀಪದ ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಕಲ್ಸಂಕ, ಅಂಬಾಗಿಲು ವ್ಯಾಪ್ತಿಯಲ್ಲಿ ಕೃತಕ ನೆರೆ ಸಂಭವಿಸಿದೆ. ಭಾರೀ ಮಳೆಯಿಂದ ಕಾಲುವೆಗಳು ಉಕ್ಕಿ ಹರಿಯುತ್ತಿದ್ದು, ರಸ್ತೆಗಳಲ್ಲಿಯೂ ನೀರು ತುಂಬಿಕೊಂಡಿದೆ. ಹೀಗಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ರಸ್ತೆಯಲ್ಲಿ ಕಷ್ಟಪಟ್ಟು ಸಂಚರಿಸುತ್ತಿದ್ದಾರೆ.
Advertisement
Advertisement
24 ಗಂಟೆಯ ಅವಧಿಯಲ್ಲಿ ಒಟ್ಟು 135 ಮಿಲಿಮೀಟರ್ ಸರಾಸರಿ ಮಳೆ ದಾಖಲಾಗಿದೆ. ಕುಂದಾಪುರದಲ್ಲಿ ಅತೀ ಹೆಚ್ಚು ದಾಖಲಾಗಿದ್ದು, 155 ಮಿಲಿಮೀಟರ್ ಮಳೆ ಸುರಿದಿದೆ. ಇನ್ನು ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿಮೀಟರ್ ಮಳೆಯಾಗಿದೆ ಎಂದು ಉಡುಪಿ ಹವಾಮಾನ ಇಲಾಖೆ ತಿಳಿಸಿದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
Advertisement
Advertisement
ನಿರಂತರ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜಿಗೆ ಘೋಷಿಸಿರುವ ರಜೆಯನ್ನು ವಿಸ್ತರಿಸುವಂತೆ ಪಿಯುಸಿ, ಪದವಿ ವಿದ್ಯಾರ್ಥಿಗಳ ಪೋಷಕರು ಜಿಲ್ಲಾಧಿಕಾರಿಗಳಿಗೆ ಒತ್ತಡ ಹೇರಿದ ಹಿನ್ನೆಲೆ ಉಡುಪಿ ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಪದವಿ ಕಾಲೇಜುಗಳಿಗೂ ರಜೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಈವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಭಾರೀ ಗಾಳಿ, ಮಳೆ ಹಾಗೂ ಪೋಷಕರ ಒತ್ತಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತಕ್ಷಣ ಮೌಖಿಕ ರಜೆ ಘೋಷಿಸಿದ್ದಾರೆ.