ಮಂಡ್ಯ: ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ವೈದ್ಯರು, ದಾದಿಯರಿಲ್ಲದ ಪರಿಣಾಮ ತುಂಬು ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಅರ್ಧಗಂಟೆಗೂ ಹೆಚ್ಚು ಕಾಲ ಆಸ್ಪತ್ರೆ ಮುಂದೆ ನರಳಾಡಿದ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ, ಬೆಳಕವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮುಂಭಾಗ ಚಿಕ್ಕಗಾಣಿಗರ ಬೀದಿ ನಿವಾಸಿ ಮಂಜು ಎಂಬವರ ಪತ್ನಿ 22 ವರ್ಷದ ದಿವ್ಯ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ ವೈದ್ಯರಾಗಲೀ, ದಾದಿಯರಾಗಲೀ ಇರದ ಕಾರಣ ಗರ್ಭಿಣಿ ನೋವಿನಿಂದ ಕಣ್ಣೀರು ಹಾಕುತ್ತಾ ನರಳಾಡಿದ್ದಾರೆ.
Advertisement
ಗರ್ಭಿಣಿಯ ಸಂಕಟ ನೋಡಿ ಜೊತೆಯಲ್ಲಿದ್ದ ಸಂಬಂಧಿಕರು ಹಾಗೂ ಸ್ಥಳೀಯರು ಕೂಡ ಕಣ್ಣೀರು ಹಾಕಿದ್ದಾರೆ. ತಕ್ಷಣ ಆಂಬುಲೆನ್ಸ್ ವ್ಯವಸ್ಥೆಯೂ ಆಗಿಲ್ಲ. ಕೊನೆಗೆ ಮಳವಳ್ಳಿಯಿಂದ ಆಂಬುಲೆನ್ಸ್ ಕರೆಸಿ ಗರ್ಭಿಣಿಯನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗರ್ಭಿಣಿ ನರಳಾಡುವ ದೃಶ್ಯವನ್ನ ಸ್ಥಳದಲ್ಲಿದ್ದವರು ವಿಡಿಯೋ ಮಾಡಿದ್ದಾರೆ.
Advertisement
ಬೆಳಕವಾಡಿ ಪ್ರಾಥಮಿಕ ಆರೋಗ್ಯಕೇಂದ್ರದ ನೂತನ ಕಟ್ಟಡ ಈಗಾಗಲೇ ಉದ್ಘಾಟನೆಯಾಗಿದ್ದರೂ ತಾತ್ಕಾಲಿಕವಾಗಿ ಸರ್ಕಾರಿ ಶಾಲೆಯ ಕಟ್ಟಡದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸಕಾಲಕ್ಕೆ ವೈದ್ಯರು, ದಾದಿಯರು ಸಿಗದ ಕಾರಣ ಆಸ್ಪತ್ರೆಗೆ ಬರುವ ರೋಗಿಗಳು ತೊಂದರೆ ಅನುಭವಿಸುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
Advertisement
ಸದ್ಯ ದಿವ್ಯ ಅವರು ಮಳವಳ್ಳಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
Advertisement
https://youtu.be/hRtYZaDX28s