ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಗದ್ದಲ ನಡೆಸಿದ ಹಿನ್ನೆಲೆಯಲ್ಲಿ ಸಭಾಪತಿ ಸಲೀಂ ಅಹಮದ್ ಅವರು ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದರು.

ಕಲಾಪ ಆರಂಭವಾಗುತ್ತಿದ್ದಂತೆ ಚಾಮರಾಜನಗರ ಎನ್‌ಕೌಂಟರ್ ಪ್ರಕರಣದ ವಿಚಾರ ಚರ್ಚೆಯಾಯಿತು. ಬಳಿಕ ವಾಲ್ಮೀಕಿ ನಿಗಮದ ಹಗರಣದ ವಿಚಾರವನ್ನು ವಿಪಕ್ಷಗಳು ಪ್ರಸ್ತಾಪಿಸಿದವು. ಹಗರಣದ ಆರೋಪ ಎದುರಿಸಿರುವ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು.
ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಸಿಎಂ ಸದನಕ್ಕೆ ಬಂದು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದು ಹೇಳಬೇಕು. ಅಲ್ಲಿಯವರೆಗೆ ಸದನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷಗಳು ಪಟ್ಟು ಹಿಡಿದವು.
ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು. ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸರ್ಕಾರಕ್ಕೆ ಕಪ್ಪುಚುಕ್ಕೆ ಎಂದು ವಿಪಕ್ಷ ಸದಸ್ಯರು ಕಿಡಿಕಾರಿದರು. ಇದನ್ನೂ ಓದಿ: ಅರಣ್ಯ ಸಿಬ್ಬಂದಿ ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದ್ರು – ಹನೂರು ಎನ್‌ಕೌಂಟರ್ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ವಿಪಕ್ಷಗಳ ಪ್ರತಿಭಟನೆ ಮತ್ತು ಘೋಷಣೆಗಳ ನಡುವೆ ಸಭಾಪತಿ ಸಲೀಂ ಅಹಮದ್ ಅವರು ಪ್ರಶ್ನೋತ್ತರ ಕಲಾಪ ನಡೆಸಲು ಮುಂದಾದರು. ಆದರೆ ಬಿಜೆಪಿ-ಜೆಡಿಎಸ್ ಸದಸ್ಯರು ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳದೆ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದರು.
ಪ್ರಶ್ನೋತ್ತರ ಕಲಾಪ ಹಾಗೂ ಶೂನ್ಯ ವೇಳೆ ಮುಗಿದ ಬಳಿಕವೂ ಗದ್ದಲ ಮುಂದುವರಿಯಿತು. ವಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ಸಭಾಪತಿ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದರು. ಇದನ್ನೂ ಓದಿ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ – ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ವಿಚಾರಣೆಗೆ ಸುಪ್ರೀಂ ತಡೆ
