ಧಾರವಾಡ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಮಲಪ್ರಭಾ, ಮಹದಾಯಿ, ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಸೇರಿದಂತೆ ನೂರಕ್ಕೂ ಹೆಚ್ಚು ವಿವಿಧ ಕನ್ನಡಪರ, ರೈತ ಸಂಘಟನೆಗಳು ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಬಂದ್ ಆರಂಭಿಸಿವೆ.
ಧಾರವಾಡ ನಗರದ ಜುಬ್ಲಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಕನ್ನಡ ಪರ ಹಾಗೂ ರೈತ ಹೋರಾಟಗಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ನರಗುಂದದಲ್ಲಿ ಆಕ್ರೋಶ ಭುಗಿಲೆದಿದ್ದು, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕುತ್ತಿದ್ದಾರೆ. ಪ್ರತಿಭಟನಾಕಾರರು ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ವಾಹನಗಳನ್ನು ತಡೆದು ಹಿಂದಕ್ಕೆ ಕಳಿಸುತ್ತಿದ್ದಾರೆ.
Advertisement
Advertisement
ಗದಗ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಗದಗ ಹಾಗೂ ಗಜೇಂದ್ರಗಢ ನಗರದಲ್ಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ನಸುಕಿನಲ್ಲೇ ಕನ್ನಡಪರ ಸಂಘಟನೆಗಳು ಬೀದಿಗಿಳಿದಿದ್ದಾರೆ. ಗಜೇಂದ್ರಗಢ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದ್ದು, ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ, ರಸ್ತೆ ತಡೆಯುತ್ತಿದ್ದಾರೆ. ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿಜಯಪುರದಿಂದ ಹುಬ್ಬಳ್ಳಿಗೆ ಹೊರಟಿದ್ದ ಪೆಟ್ರೋಲ್ ಟ್ಯಾಂಕರ್ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.
Advertisement
Advertisement
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಆರಂಭವಾಗಿದ್ದು, ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯ ರೈಲು ನಿಲ್ದಾಣದ ಮುಂದೆ ಕನ್ನಡಪರ ಸಂಘನೆಗಳು ಹೋರಾಟ ನಡೆಸುತ್ತಿವೆ.
ಬಂದ್ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿದೆ. ರೈಲ್ವೆ ನಿಲ್ದಾಣದೆದುರು ಸಂಗ್ರಾಮ ಸೇನೆಯಿಂದ ಪ್ರತಿಭಟನೆ ನಡೆಯುತ್ತಿದ್ದು, ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಹೋರಾಟಗಾರರನ್ನ ಪೊಲೀಸರು ತಡೆದಿದ್ದಾರೆ.
ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ನಗರವನ್ನು ಸಂಪರ್ಕಿಸುವ ಹೆದ್ದಾರಿಗಳನ್ನು ತಡೆಯಲು ಹೋರಾಟಗಾರರು ತೀರ್ಮಾನಿಸಿದ್ದಾರೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ವೆ ನಿಲ್ದಾಣ, ಅಂಚೆ ಕಚೇರಿ, ಬಿಎಸ್‍ಎನ್‍ಎಲ್ ಕಚೇರಿಗಳಿಗೂ ಮುತ್ತಿಗೆ ಹಾಕುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಹಲವೆಡೆ ಬಂದ್ ಗೆ ಕರೆ ನೀಡಿರುವುದರಿಂದ ಅರ್ಧ ಕರ್ನಾಟಕದ ಜನಜೀವನ ಸ್ಥಗಿತಗೊಳ್ಳಲಿದೆ. ಎಲ್ಲಾ ಅಂಗಡಿ ಮುಂಗಟ್ಟು, ಹೋಟೆಲ್, ವಾಣಿಜ್ಯ ವಹಿವಾಟು ಸ್ಥಗಿತಗೊಳ್ಳಲಿದೆ. ಆಟೋ ಸಂಚಾರ, ಟ್ಯಾಕ್ಸಿ ಸಂಚಾರವೂ ಸ್ತಬ್ಧಗೊಳ್ಳಲಿದೆ. ಬಂದ್ ಗೆ ಚಿತ್ರೋದ್ಯಮವೂ ಬೆಂಬಲ ನೀಡಿದೆ.
ಕಳೆದ ಬಾರಿ ಗಲಾಟೆ ಹೆಚ್ಚಾಗಿದ್ದ ನವಲಗುಂದ ತಾಲೂಕಿನ ಯಮನೂರು, ಅಳಗವಾಡಿ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯಿಂದಲೇ ಬಂದೋಬಸ್ತ್ ಹೆಚ್ಚಿಸಲಾಗಿದೆ. ಜಿಲ್ಲೆಯ ಬಂದೋಬಸ್ತ್ ಗಾಗಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ: ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್: ಎಲ್ಲಿ ಬಂದ್? ಏನ್ ಇರುತ್ತೆ? ಏನ್ ಇರಲ್ಲ?