– ಪರಿಶಿಷ್ಟ ಜಾತಿ, ಪಂಗಡಗಳ ಶಾಪ ನಿಮಗೆ ತಟ್ಟದೇ ಬಿಡುವುದಿಲ್ಲ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಭವಿಷ್ಯ ನುಡಿದಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಬಳಿ ಅವರು ಮಾತನಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ (Valmiki Corporation Scam) ಹಣಕಾಸು ಇಲಾಖೆ ಸಚಿವರೂ ಆದ ಸಿಎಂ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿರೋದು ನಿಜ: ಒಪ್ಪಿಕೊಂಡ ಸಿಎಂ
ಕೇವಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಅವರಷ್ಟೇ ಅಲ್ಲ, ಇನ್ನೂ ದೊಡ್ಡ ದೊಡ್ಡವರ ಹೆಸರು ಮುಂದೆ ಬರಲಿದೆ. ಹಾಗಾಗಿ ಆತಂಕದಿಂದಲೇ ರಾಜ್ಯದ 5 ಸಚಿವರು ಇಡಿ ಮೇಲೆ ಆಪಾದನೆ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಸದನದಲ್ಲಿ ಸಿಎಂ ಉತ್ತರ ಕೊಡುವ ಪ್ರಯತ್ನ ಮಾಡಿದ್ದು, ಸತ್ಯಸಂಗತಿಗಳನ್ನು ಮರೆಮಾಚಿ, ಸದನಕ್ಕೆ ಮತ್ತು ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ಈ ಹಗರಣದಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯ ಇಲ್ಲ ಎಂಬುದಂತೂ ಸತ್ಯ. ಸಿದ್ದರಾಮಯ್ಯನವರೇ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಿಂದ ಪರಿಶಿಷ್ಟ ಜಾತಿ, ಪಂಗಡಗಳ ಶಾಪ ನಿಮಗೆ ತಟ್ಟದೇ ಬಿಡುವುದಿಲ್ಲ. ಇ.ಡಿ, ಸಿಬಿಐ ತನಿಖೆ ನಡೆಯುತ್ತಿದ್ದು, ತಾವು ಉತ್ತರ ಕೊಡಲೇಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣ; ಎಸ್‌ಐಟಿ ಮುಟ್ಟುಗೋಲು ಹಾಕಿಕೊಂಡ ಹಣದ ವಿವರ ನೀಡಿದ ಸಿಎಂ