ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ (Melukote) ನ.9ರಂದು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ (CP Radhakrishan) ಅವರು ಆಗಮಿಸಲಿದ್ದಾರೆ. ಈ ಹಿನ್ನೆಲೆ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೇಲುಕೋಟೆ ಪ್ರವಾಸಿ ಮಂದಿರದಲ್ಲಿಂದು ಜಿಲ್ಲಾಧಿಕಾರಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರು. ಅಧಿಕಾರಿಗಳು ಕಾರ್ಯಕ್ರಮದ ಹಿನ್ನೆಲೆ ಮಾಡಿಕೊಂಡಿರುವ ತಯಾರಿ ಬಗ್ಗೆ ವರದಿ ನೀಡುವಂತೆ ತಿಳಿಸಿದರು.ಇದನ್ನೂ ಓದಿ: ನಿವೃತ್ತ ಅಧಿಕಾರಿಯ ಮಗಳ ಹೆಣ ಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇನ್ಸ್‌ಪೆಕ್ಟರ್ ಅಮಾನತು
ಮಾರ್ಗಸೂಚಿಯಂತೆ ಅಧಿಕಾರಿಗಳು ಕೆಲಸ ನಿರ್ವಹಣೆ ಮಾಡಬೇಕು. ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ನಿರಂತರವಾಗಿ ವಿದ್ಯುತ್ ಸಂಪರ್ಕ, ಇಂಟರ್ ನೆಟ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು ಎಂದರು.
ರಸ್ತೆಗಳ ಅಕ್ಕಪಕ್ಕದಲ್ಲಿ ಸ್ವಚ್ಛತೆಗೆ ಕ್ರಮವಹಿಸಬೇಕು ಸುಸ್ಸಜ್ಜಿತ ಆಂಬುಲೆನ್ಸ್‌ನೊಂದಿಗೆ ನುರಿತ ಆರೋಗ್ಯ ಸಿಬ್ಬಂದಿಯನ್ನು ನೇಮಿಸಬೇಕು. ಸ್ಥಳದಲ್ಲಿ ಗ್ರೀನ್ ರೂಮ್‌ನಲ್ಲಿ ಗಣ್ಯರಿಗೆ ಬೇಕಾಗುವ ವ್ಯವಸ್ಥೆಯ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಗ್ನಿಶಾಮಕ ದಳದ ಹೆಲಿಪ್ಯಾಡ್ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಶಿಷ್ಟಾಚಾರದಂತೆ ಅಗತ್ಯ ಕ್ರಮವಹಿಸುವಂತೆ ಹಾಗೂ ವಾಹನಗಳನ್ನು ಇರಿಸಲು ಕ್ರಮವಹಿಸುವಂತೆ ಹೇಳಿದರು.
ಸಣ್ಣ ಸಣ್ಣ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.ಇದನ್ನೂ ಓದಿ: ಕಬ್ಬು ಬೆಳೆಗಾರರ ಪ್ರತಿಭಟನೆ ಯಾಕೆ? ಮಹಾರಾಷ್ಟ್ರ, ಗುಜರಾತ್‌ನಲ್ಲಿ 1 ಟನ್ ಕಬ್ಬಿಗೆ ಎಷ್ಟು ಸಿಗುತ್ತೆ?

