ವಿಜಯಪುರ: ಹಾಲು ಮಾರುವವಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ.
ಹಡಲಗೇರಿ ಗ್ರಾಮದ ಸಂಗಪ್ಪ ಮೊರ್ಕೆ (45) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಗಂಗನಗೌಡ ಬಿರಾದಾರ್ ಸೇರಿದಂತೆ ಇಬ್ಬರು ಕೊಲೆಗೈದು, ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ ಮೊರ್ಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸಂಗಪ್ಪ ಮೊರ್ಕೆ ಜಮೀನಿನಿಂದ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಬೈಕ್‍ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ಸಂಗಪ್ಪ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಎದೆಗೆ ಚೂರಿ ಇರಿದ ಪರಿಣಾಮ ಸಂಗಪ್ಪ ಗಂಭೀರವಾಗಿ ಗಾಯಗೊಂಡು ಕೆಳಗೆ ಬಿದ್ದು ಒದ್ದಾಡುತ್ತಿದ್ದರು. ಈ ವೇಳೆ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ ಸಂಗಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಗಪ್ಪ ಮೃತದೇಹವನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.