ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ಇವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ.
ಪ್ರೇಜಾವರ ಶ್ರೀಗಳ ಪಾರ್ಥಿವ ಶರೀರವನ್ನು ಕೃಷ್ಣಮಠಕ್ಕೆ ಶಿಫ್ಟ್ ಮಾಡಲಾಗುತ್ತದೆ. ಸುಮಾರು 20 ನಿಮಿಷ ಕಾಲ ಮಠದಲ್ಲೇ ಇರಲಿದ್ದು, ಅಲ್ಲಿ ಅಷ್ಟಮಠಾಧೀಶರು ಮಧ್ವ ಸರೋವರದಲ್ಲಿ ಸ್ನಾನ, ಅಭಿಷೇಕ ಮಾಡಿಸಲಿದ್ದಾರೆ. ನಂತರ ಕನಕನ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಇದನ್ನೂ ಓದಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ
Advertisement
Advertisement
ಅಲ್ಲಿ ಮಧ್ಯಾಹ್ನ 12 ಗಂಟೆಯವರೆಗೂ ಸಾರ್ವಜನಿಕರಿಗೆ ಪೇಜಾವರ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶ್ರೀಗಳ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೊನೆಗೆ ವಿದ್ಯಾಪೀಠದಲ್ಲಿ ಸರ್ಕಾರದ ಸಕಲ ಗೌರವದೊಂದಿಗೆ ಪೇಜಾವರ ಶ್ರೀಗಳ ಬೃಂದಾವನ ಮಾಡಲಾಗುತ್ತದೆ.
Advertisement
ರಕ್ತದೊತ್ತಡ, ಮಧುಮೇಹ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಕಳೆದ ಶುಕ್ರವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 9 ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ಗುರುವಾರದಿಂದ ಹೆಚ್ಚೇನೂ ಸುಧಾರಣೆಯಾಗಿರಲಿಲ್ಲ. ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದರು.
Advertisement
ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣೈಕ್ಯರಾದರು.