ಬೆಂಗಳೂರು: ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯ ಇಳಿಕೆ ಹಿನ್ನಲೆಯಲ್ಲಿ ಈ ಬಾರಿ ಬೇಸಿಗೆ ಬೆಳೆಗೆ ರೈತರ ಜಮೀನಿಗೆ ನೀರು ಬಿಡದಂತೆ ಜಲಸಂಪನ್ಮೂಲ ಇಲಾಖೆಯ ಸೂಚನೆ ನೀಡಿದೆ.
ರಾಜ್ಯದ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗುತ್ತದೆ. ಸದ್ಯ ಜಲಾಶಯಗಳಲ್ಲಿ ಇರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಬಳಸಬೇಕು. ಯಾವುದೇ ಕಾರಣಕ್ಕೂ ಬೇಸಿಗೆ ಬೆಳೆಗೆ ನೀರು ಬಿಡುಗಡೆ ಮಾಡಬಾರದು ಎಂದು ಜಲಸಂಪನ್ಮೂಲ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಪತ್ರದ ಮೂಲಕ ವಿವಿಧ ಜಲಾಶಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿ, ಕಲಬುರಗಿ, ಬೆಂಗಳೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಕಾವೇರಿ ನಿರಾವರಿ ನಿಗಮ ನಿಯಮಿತ, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಬೇಸಿಗೆ ಬೆಳಗೆ ರೈತರಿಗೆ ನೀರು ಬಿಡದಂತೆ ಸೂಚಿಸಲಾಗಿದೆ.

ಪತ್ರದಲ್ಲಿ ಏನಿದೆ?
ಜಲ ಸಂಪನ್ಮೂಲ ಇಲಾಖೆ ಅಡಿಯಲ್ಲಿನ ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನು ಬೇಸಿಗೆಯಲ್ಲಿ ಹಾಗೂ ನೀರಿನ ಅಭಾವವಿರುವ ಪರಿಸ್ಥಿತಿಯಲ್ಲಿ ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ನಿರ್ಧರಿಸಲು ಆಯಾ ಪ್ರಾದೇಶಿಕ ಆಯುಕ್ತರುಗಳಿಗೆ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗಿದೆ. 2018 ಡಿಸೆಂಬರ್ 16ರಂದು ಕಂದಾಯ ಸಚಿವರ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಮಳೆ ಕೊರತೆಯ ಹಿನ್ನೆಲೆಗಳಲ್ಲಿ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಲಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಜಲಾಶಯದ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲು ನಿರ್ಣಯಿಸಲಾಗಿದೆ.

ಪ್ರಸ್ತುತ ಜಲಾಶಯಗಳಲ್ಲಿ ಒಳಹರಿವು ಇಲ್ಲದ ಕಾರಣದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಅಭಾವವನ್ನು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗುವುದನ್ನು ತಪ್ಪಿಸಲು, ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ವ್ಯವಸ್ಥಿತವಾಗಿ ಆಧ್ಯತೆಯ ಮೇರೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

