– ಡಿ.22ಕ್ಕೆ ಸಂಪುಟ ವಿಸ್ತರಣೆ ಖಚಿತ
– ಲೋಕಸಭಾ ಚುನಾವಣೆಯ ನಂತರ ನಿರ್ಣಾಯಕ ಹೋರಾಟ
ವಿಜಯಪುರ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ವಿಚಾರವನ್ನು ಲೋಕಸಭೆ ಚುನಾವಣೆವರೆಗೆ ಶಾಂತವಾಗಿರಲು ನಿರ್ಧಾರ ಮಾಡಿದ್ದು, ಈಗ ಹೋರಾಟ ಮಾಡಿದರೆ ತಪ್ಪಾಗಿ ಅರ್ಥೈಸಲಾಗುತ್ತದೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಬಿ ಪಾಟೀಲ್ ಅವರು, ಕೇಂದ್ರ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವವನ್ನು ತಿರಸ್ಕರಿಸಿರುವುದು ಸಮಂಜಸವಲ್ಲ. ಈ ಕುರಿತು ಲೋಕಸಭಾ ಚುನಾವಣೆಯ ಬಳಿಕ ನಿರ್ಣಾಯಕ ಹೋರಾಟ ಮಾಡುತ್ತೇವೆ. ಈಗ ಹೋರಾಟ ಮಾಡಿದರೆ ಅದಕ್ಕೆ ಬೇರೆ ರೀತಿಯ ಅರ್ಥ ಕೊಡುತ್ತಾರೆ. ಈ ಹಿನ್ನೆಲೆ ಲೋಕಸಭೆ ಚುನಾವಣೆ ಬಳಿಕ ನಿರ್ಣಾಯಕ ಹೋರಾಟ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
Advertisement
Advertisement
ಇದೇ ವೇಳೆ ಮಾಧ್ಯಮಗಳ ವಿರುದ್ಧ ಹರಿಹಾಯ್ದ ಎಂಬಿ ಪಾಟೀಲ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಲಿಂಗಾಯತ ಪ್ರತ್ಯೇಕ ಧರ್ಮದ ಹೇಳಿಕೆಯನ್ನು ತಿರುಚಿವೆ ಎಂದು ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
ಡಿ.22 ಸಂಪುಟ: ಸಚಿವ ಸಂಪುಟ ಡಿ.22 ರಂದು ವಿಸ್ತರಣೆಯಾಗಲಿದೆ. ಈಗಾಗಲೇ ಸಮನ್ವಯ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದೆ. ಸಂಪುಟ ವಿಸ್ತರಣೆ ವೇಳೆ ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎನ್ನುವ ಬೇಡಿಕೆ ಇಟ್ಟಿದ್ದೇನೆ. ಈ ಕುರಿತು ಅಸಮತೋಲನದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೇವೆ. ಅಲ್ಲದೇ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೂ ಕೂಡ ಮನವರಿಕೆಯಾಗಿದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಅಧಿಕಾರ ಪೂರೈಸಲಿದ್ದು, ನಾವು ಬಸವ ಧರ್ಮದವರು, ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನೋಡುವವರಲ್ಲ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com