ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಭಾರತ್ ಬಂದ್ ನಡೆಯುತ್ತಿರುವ ಸಂದರ್ಭದಲ್ಲೇ ಈಗ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ವ್ಯಾಪ್ತಿಗೆ ತರಬೇಕು ಎನ್ನುವ ಆಗ್ರಹ ಕೇಳಿಬಂದಿದೆ.
ಜನರು ಮತ್ತು ರಾಜಕೀಯ ಪಕ್ಷಗಳು ಆಗ್ರಹಿಸುತ್ತಿದ್ದರೂ ಜಿಎಸ್‍ಟಿ ವ್ಯಾಪ್ತಿಗೆ ತೈಲ ಬರುವುದು ಅಷ್ಟು ಸುಲಭವಿಲ್ಲ. ಜಿಎಸ್‍ಟಿ ವ್ಯಾಪ್ತಿಗೆ ತಂದರೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಹಾಕುವ ಸಂಭವವೇ ಹೆಚ್ಚು.
Advertisement
ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.
Advertisement
Advertisement
ಯಾಕೆ ಬಿಟ್ಟುಕೊಡಲ್ಲ?
ರಾಜ್ಯ ಸರ್ಕಾರಗಳಿಗೆ ಅತಿಹೆಚ್ಚು ಆದಾಯ ಮೂಲವೇ ತೈಲ. ಕೇಂದ್ರ ಸರ್ಕಾರ ಅಬಕಾರಿ ಸುಂಕ ಹಾಕಿದರೆ ರಾಜ್ಯ ಸರ್ಕಾರ ವ್ಯಾಟ್ ಹಾಕುತ್ತದೆ. ಈ ಮೂಲಕ ರಾಜ್ಯದ ಬೊಕ್ಕಸವನ್ನು ತುಂಬಿಸಿಕೊಳ್ಳುತ್ತದೆ. ಅಷ್ಟೇ ಅಲ್ಲದೇ ಸುಲಭವಾಗಿ ಆದಾಯ ಸಂಗ್ರಹವಾಗುತ್ತದೆ. ಕರ್ನಾಟಕ ಸರ್ಕಾರ ರೈತರ ಸಾಲಮನ್ನಾ ಮಾಡಲು ಆರ್ಥಿಕ ಸಂಪನ್ಮೂಲ ಹೆಚ್ಚಿಸಲು ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಸಹ ಹಾಕಿದೆ. ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಸಂಪನ್ಮೂಲ ಹೆಚ್ಚಳ ಮಾಡಲು ಇರುವ ಏಕೈಕ ಮಾರ್ಗ ಎಂದರೆ ತೈಲ. ಹೀಗಾಗಿ ಯಾವುದೇ ಸರ್ಕಾರ ಪೆಟ್ರೋಲನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡುತ್ತಿಲ್ಲ. ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?
Advertisement
ಕಾಂಗ್ರೆಸ್, ಬಿಜೆಪಿ ನಿಲುವು ಏನು?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್‍ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲವನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ನಿರ್ಧಾರವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಈ ಹಿಂದೆಯೇ ಬೆಂಬಲಿಸಿದ್ದರು. ರಾಜ್ಯಸಭೆಯಲ್ಲಿ ಮಾಜಿ ಹಣಕಾಸು ಸಚಿವ ಪಿಚಿದಂಬರಂ ಮಾತನಾಡಿ, ಪ್ರಸ್ತುತ 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿ ಅಡಿಯಲ್ಲಿ ತರಲು ಅಡ್ಡಿಯಾಗಿರುವುದು ಏನು? ಯಾವಾಗ ಜಿಎಸ್‍ಟಿ ಕೌನ್ಸಿಲ್ ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತದೆ ಎಂದು ಪ್ರಶ್ನಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಜೇಟ್ಲಿ, ಜಿಎಸ್‍ಟಿ ಕರಡು ನಿಯಮಗಳನ್ನು ರಚಿಸುವ ವೇಳೆ ಯುಪಿಎ ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್‍ಟಿ ವ್ಯಾಪ್ತಿಯ ಒಳಗಡೆ ಸೇರಿಸಲಿಲ್ಲ. ಕೇಂದ್ರ ಮತ್ತು ರಾಜ್ಯಗಳ ಸಂಬಂಧ ಹಾಳಾಗಬಹುದು ಎನ್ನುವ ಕಾರಣಕ್ಕೆ ಯುಪಿಎ ಸೇರಿಸಲಿಲ್ಲ. ಆದರೆ ಈಗಲಾದರೂ ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗುವ ಬಗ್ಗೆ ರಾಜ್ಯಗಳು ಶೀಘ್ರ ಅಥವಾ ನಂತರವಾದರೂ ಒಪ್ಪಿಗೆ ನೀಡಬಹುದು ಎನ್ನುವ ಆಶಾವಾದವನ್ನು ನಾವು ಇಟ್ಟುಕೊಂಡಿದ್ದೇವೆ ಎಂದು ಉತ್ತರಿಸಿದ್ದರು.
ಈ ಹಿಂದೆ ಬಿಹಾರದ ಹಣಕಾಸು ಸಚಿವ ಸುಶೀಲ್ ಮೋದಿ ಕಳೆದ ವಾರ ಜಿಎಸ್‍ಟಿ ವ್ಯಾಪ್ತಿಯ ಅಡಿಯಲ್ಲಿ ವಿದ್ಯುತ್, ಪೆಟ್ರೋಲಿಯಂ ಉತ್ಪನ್ನಗಳನ್ನು ತರುವ ಬಗ್ಗೆ ಸುಳಿವು ನೀಡಿದ್ದರು. ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಮಾತನಾಡಿದ ಸುಶೀಲ್ ಮೋದಿ, ಎಲೆಕ್ಟ್ರಿಸಿಟಿ, ರಿಯಲ್ ಎಸ್ಟೇಟ್, ಪೆಟ್ರೋಲಿಯಂ ಜಿಎಸ್‍ಟಿ ವ್ಯಾಪ್ತಿಗೆ ತರಬೇಕಿದೆ. ಆದರೆ ಇದನ್ನು ವ್ಯಾಪ್ತಿಗೆ ತರುವುದು ಜಿಎಸ್‍ಟಿ ಕೌನ್ಸಿಲ್‍ಗೆ ಬಹಳ ಸವಾಲಿದೆ ಎಂದು ತಿಳಿಸಿದ್ದರು. ಇದನ್ನು ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?
ರಾಜಕೀಯ ಪಕ್ಷಗಳ ನಿಲುವು ಏನು?
ಜಿಎಸ್‍ಟಿ ವ್ಯಾಪ್ತಿಗೆ ತೈಲವನ್ನು ತರದ್ದಕ್ಕೆ ಕಾಂಗ್ರೆಸ್ ಬಿಜೆಪಿಯನ್ನು ದೂರಿದರೆ, ಬಿಜೆಪಿ ನಾಯಕರು ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿಲ್ಲ ಎಂದು ಹೇಳಿ ಕೈ ತೊಳೆದುಕೊಳ್ಳುತ್ತದೆ. ಒಂದು ವೇಳೆ ಜಿಎಸ್‍ಟಿ ವ್ಯಾಪ್ತಿಗೆ ತೈಲ ತಂದರೆ ರಾಜ್ಯ ಸರ್ಕಾರಕ್ಕೆ ನಷ್ಟ ಹೆಚ್ಚು. ಹೀಗಾಗಿ ವಿವಿಧ ರಾಜ್ಯದಲ್ಲಿರುವ ರಾಜಕೀಯ ಪಕ್ಷಗಳು ಜಿಎಸ್‍ಟಿ ವ್ಯಾಪ್ತಿಗೆ ತೈಲ ತರಬೇಕು ಎಂದು ಆಗ್ರಹಿಸುತ್ತಿದ್ದರೆ ಹೊರತು ಎಲ್ಲ ಪಕ್ಷಗಳು ಒಟ್ಟಾಗಿ ಒಂದು ನಿರ್ಣಯವನ್ನು ತೆಗೆದುಕೊಳ್ಳುತ್ತಿಲ್ಲ. ದೇಶದ ಆರ್ಥಿಕತೆಗೆ ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ದಕ್ಷಿಣ ಭಾಗದ ರಾಜ್ಯಗಳಿಂದಲೇ ಅತಿ ಹೆಚ್ಚು ತೆರಿಗೆ ಸಂಗ್ರಹವಾಗುತ್ತದೆ. ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಎನ್‍ಡಿಎ ಹೊರತಾಗಿರುವ ಪಕ್ಷಗಳು ಆಡಳಿತದಲ್ಲಿದೆ. ಹೀಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ ರಾಜ್ಯಗಳು ಒಪ್ಪಿಗೆ ನೀಡಿದರೆ ಜಿಎಸ್‍ಟಿ ವ್ಯಾಪ್ತಿಯ ಒಳಗಡೆ ತೈಲ ಬರಬಹುದು. ಈ ರಾಜ್ಯಗಳು ಒಪ್ಪಿಗೆ ನೀಡಿದರೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಬೆಂಬಲ ನೀಡಲೇಬೇಕಾಗುತ್ತದೆ.
ತೈಲ ಬೆಲೆ ಕಡಿಮೆಯಾಗಬಾರದು:
ತೈಲ ಬೆಲೆ ಕಡಿಮೆಯಾಗಬೇಕು ಎಂದು ಜನ ಸಾಮಾನ್ಯರು ಹೇಳುತ್ತಿದ್ದರೆ ಕೆಲವರು ತೈಲ ಬೆಲೆ ಕಡಿಮೆ ಮಾಡಬಾರದು ಎನ್ನುವ ವಾದವನ್ನು ಮುಂದಿಡುತ್ತಿದ್ದಾರೆ. ಒಂದು ವೇಳೆ ತೈಲ ಬೆಲೆ ಇಳಿಕೆಯಾದರೆ ಸಾಕಷ್ಟು ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿಯುತ್ತದೆ. ಇದರಿಂದ ವಾಯು ಮಾಲಿನ್ಯ ಹೆಚ್ಚಾಗುತ್ತದೆ. ನಗರದಲ್ಲಿ ಮತ್ತಷ್ಟು ಸಂಚಾರ ದಟ್ಟಣೆ ಹೆಚ್ಚಾಗುತ್ತದೆ. ಹೀಗಾಗಿ ತೈಲ ದರವನ್ನು ಇಳಿಸುವ ಬದಲು ಸಮೂಹ ಸಾರಿಗೆ ವ್ಯವಸ್ಥೆಗಳಾದ ಬಸ್ಸು, ರೈಲುಗಳ ಪ್ರಯಾಣ ದರವನ್ನು ಇಳಿಸಬೇಕು. ಹೇಗೆ ಪ್ರತಿನಿತ್ಯ ಬಳಸುವ ವಸ್ತುಗಳು ಬೆಲೆಗಳು ಏರಿಕೆಯಾಗುತ್ತದೋ ಅದೇ ರೀತಿಯಾಗಿ ತೈಲ ಬೆಲೆ ಏರಿಕೆಯಾದರೆ ತಪ್ಪಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಭಾರೀ ಏರಿಕೆಯಾದಾಗ ನಮ್ಮಲ್ಲಿ ಬೆಲೆ ಇಳಿಸಿದರೆ ದೇಶದ ಆರ್ಥಿಕತೆಗೆ ಹೊಡೆತ ಬೀಳುತ್ತದೆ ಎನ್ನುವ ವಾದವನ್ನು ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‌ಗೆ 40 ರೂ.ಅಷ್ಟೇ!
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv