ಮಡಿಕೇರಿ: ಕೊಡಗಿನಲ್ಲಿ ಪುಂಡಾಟ ನಡೆಸುತ್ತಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ 8 ಸಾಕಾನೆಗಳನ್ನು ಬಳಸಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿತ್ತು. ಕಾಡಾನೆಯ ಉಪಟಳಕ್ಕೆ ಬೇಸತ್ತಿದ್ದ ಜನರು ಆನೆಗಳನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಹೀಗಾಗಿ ಕಾಡಾನೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಈ ಕಾರ್ಯಾಚರಣೆಯಲ್ಲಿ 40 ಕ್ಕೂ ಅಧಿಕ ಸಿಬ್ಬಂದಿ ಭಾಗಿಯಾಗಿದ್ದು, 8 ಸಾಕಾನೆಗಳ ಬಳಸಿಕೊಂಡು ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಪರಿಶ್ರಮ ಪಟ್ಟು ಕೊನೆಗೂ ಕಾಡಾನೆಯನ್ನು ಸೆರೆಹಿಡಿಯಲಾಗಿದೆ.
ಪಶುವೈದ್ಯ ಡಾ.ಮುಜೀಬ್ ಮಾರ್ಗದರ್ಶನದಲ್ಲಿ ಹಾಗೂ ಮಡಿಕೇರಿ, ವಿರಾಜಪೇಟೆ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ, ಕಾರ್ಯಾಚರಣೆ ನಡೆಸಲಾಗಿದೆ. ಅಭಿಮನ್ಯು, ಹರ್ಷ, ಅಜಯ, ಧನಂಜಯ, ವಿಕ್ರಮ, ಕೃಷ್ಣ, ಲಕ್ಷಣ, ಈಶ್ವರ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಶ್ರಮಪಟ್ಟಿದೆ. ಅಲ್ಲದೆ ಎಸಿಎಫ್ ಚಿಣ್ಣಪ್ಪ, ಡಿಎಫ್‍ಓ ಮಂಜುನಾಥ್, ರೇಂಜರ್ ಅರುಣ್ ಅವರು ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.