ಕೊಪ್ಪಳ: ಹಿರಿಯಕ್ಕನ ಚಾಳಿ ಮನೆ ಮಂದಿಗೆ ಎಂಬಂತೆ ನರೇಂದ್ರ ಮೋದಿ ಅವರಂತೆ ಬಿಜೆಪಿಯ ರಾಜ್ಯ ನಾಯಕರೂ ಸುಳ್ಳು ಹೇಳುತ್ತಿದ್ದಾರೆ. 5 ವರ್ಷ ಸರಿಯಾಗಿ ಕೆಲಸ ಮಾಡದ ಅವರು ಯೋಧರನ್ನು ಬಳಸಿಕೊಳ್ಳುವ ಮೂಲಕ ಚುನಾವಣೆಗೆ ಹೋಗುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಗಂಗಾವತಿಯಲ್ಲಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು 5 ವರ್ಷ ಬರೀ ಸುಳ್ಳು ಹೇಳಿಕೊಂಡು ಬಂದಿದ್ದಾರೆ.ಕೆಲಸ ಮಾಡಿ ಚುನಾವಣೆಗೆ ಅವರು ಹೋಗದೆ ಯೋಧರ ಮೂಲಕ ಚುನಾವಣೆಗೆ ಹೋಗುತ್ತಿದ್ದಾರೆ. ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಾರೆ. ಹಿಂದೂ-ಮುಸ್ಲಿಮರ ನಡುವೆ ಜಗಳ ಹಚ್ಚುತ್ತಾರೆ ಎಂದು ಆರೋಪಿಸಿದರು.
ಭಾರತ ಮಾತಾಕೀ ಜೈ ಎಂಬ ಸ್ಲೋಗನ್, ಜೈ ಜವಾನ್, ಜೈ ಕಿಸಾನ್ ಸ್ಲೋಗನ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ, ಬಿಜೆಪಿಯವರು ಆ ಸ್ಲೋಗನ್‍ಗಳನ್ನು ಗುತ್ತಿಗೆ ಪಡೆದವರ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಭಾರತ ಮಾತಾಕಿ ಜೈ ಎಂಬುದು ಯಾವುದೇ ಪಕ್ಷಕ್ಕೆ ಸೀಮಿತವಲ್ಲ. ನಾವೂ ಭಾರತ ಮಾತಾ ಕೀ ಜೈ ಎನ್ನುತ್ತೇವೆ. ಸಂಸದ ಅನಂತ್‍ಕುಮಾರ್ ಹೆಗ್ಡೆಗೆ ತಿಳುವಳಿಕೆ ಇಲ್ಲ. ಹೇಗೆ ಸಂಸದರಾದರೋ ಗೊತ್ತಿಲ್ಲ ಎಂದು ಟೀಕಿಸಿದರು.
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಲ್ಲಿ 8 ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಮಾರ್ಚ್ 16 ರಂದು ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗುತ್ತದೆ. ಈಗಾಗಲೇ ಜಿಲ್ಲೆಯ ಎಲ್ಲ ನಾಯಕರನ್ನ ಕರೆದು ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ನಾವೆಲ್ಲರೂ ಒತ್ತಾಯ ಮಾಡಿದ್ದೆವು. ಆದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಅಂತ ಹೇಳಿದ್ದಾರೆ. ರಾಜ್ಯ ರಾಜ್ಯಕಾರಣದಲ್ಲಿಯೇ ನಾನು ಇರುತ್ತೇನೆ. ಇದೇ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಶಿವರಾಜ್ ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv