ಬೆಂಗಳೂರು: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ವೈದ್ಯರ ನಿರ್ಲಕ್ಷ್ಯದಿಂದ ಸಾವಿಗೀಡಾಗಿದ್ದಾರೆ ಎಂದು ಆಕೆಯ ಕುಟುಂಬದವರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣದ ಧೃವ ಆಸ್ಪತ್ರೆ ಬಳಿ ನಡೆದಿದೆ.
ಲಾವಣ್ಯ (25) ಮೃತ ಮಹಿಳೆ. ಹೊಸಕೋಟೆಯ ಕಮ್ಮಸಂದ್ರ ಗ್ರಾಮದ ಲಾವಣ್ಯ ಹೊಟ್ಟೆ ನೋವಿನಿಂದ ಅ.22ರಂದು ಹೊಸಕೋಟೆಯ ಧೃವ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯೆ ನಂದಿನಿ ಸಮರ್ಪಕವಾಗಿ ಚಿಕಿತ್ಸೆ ನೀಡದ ಕಾರಣ ಲಾವಣ್ಯ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಲಾವಣ್ಯ ಸಾವಿನಿಂದ ಆಕ್ರೋಶಗೊಂಡ ಮೃತರ ಕುಟುಂಬದವರು ವೈದ್ಯರ ನಿರ್ಲಕ್ಷ್ಯ ಖಂಡಿಸಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಆಸ್ಪತ್ರೆ ಆಡಳಿತ ಮಂಡಳಿಯವರು ನಾಪತ್ತೆಯಾಗಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ.ಶಿವಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಗೆ ಬಿಗಿ ಭದ್ರತೆ ನೀಡಿದ್ದಾರೆ. ಈ ಸಂಬಂಧ ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv