ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಶೀಗೆಮಕ್ಕಿ ಗ್ರಾಮದಲ್ಲಿ ಮಂಗನ ಕಾಯಿಲೆಗೆ ತುತ್ತಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಈ ವರ್ಷ ಮತ್ತೆ ಕೆಎಫ್‍ಡಿ ಸೋಂಕಿನ ಆತಂಕ ಮಲೆನಾಡಿಗರಲ್ಲಿ ಕಾಡಲಾರಂಭಿಸಿದೆ.
ಮೃತಪಟ್ಟ ಮಹಿಳೆಯನ್ನು ಹೂವಮ್ಮ(58) ಎಂದು ಗುರುತಿಸಲಾಗಿದೆ. ಹೂವಮ್ಮ ಜ. 8ರಂದು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೂವಮ್ಮ ಅವರ ಕುಟುಂಬಸ್ಥರು ತಾಲೂಕಿನ ತುಮರಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಕೆಎಫ್‍ಡಿ ಸೋಂಕು ತಗುಲಿರಬಹುದು ಎಂಬ ಶಂಕೆಯಿಂದ ಮಣಿಪಾಲ್ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದರು. ಇದನ್ನೂ ಓದಿ: ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ
ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ನಂತರ ಮೃತ ಮಹಿಳೆಗೆ ಕೆಎಫ್‍ಡಿ ಸೋಂಕು ತಗುಲಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರೂ ಆರೋಗ್ಯದಲ್ಲಿ ಸುಧಾರಣೆ ಕಂಡು ಬರದೇ ಮಹಿಳೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಕೆಎಫ್‍ಡಿ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆರೋಗ್ಯ ಇಲಾಖೆ ಮಲೆನಾಡಿನ ಭಾಗದ ಜನರಿಗೆ ಲಸಿಕೆ ಹಾಕಿಸಲಾಗಿತ್ತು. ಹೂವಮ್ಮನ ಕುಟುಂಬಸ್ಥರು ಲಸಿಕೆ ಹಾಕಿಸಿಕೊಂಡಿದ್ದರು. ಆದರೆ ಹೂವಮ್ಮ ಮಾತ್ರ ಲಸಿಕೆ ಹಾಕಿಸಿಕೊಂಡಿರಲಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕಳೆದ ವರ್ಷ ಜಿಲ್ಲೆಯಲ್ಲಿ ಕೆಎಫ್‍ಡಿ ಸೋಂಕಿಗೆ 23 ಮಂದಿ ಬಲಿಯಾಗಿದ್ದರು.