ಬೆಳಗಾವಿ: ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ (36) ಮೃತ ದಂಪತಿ. ಮಧುರಾ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಧುರಾ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು
ಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ಗಡಿಬಿಡಿಯಲ್ಲಿ ಬೈಕ್ನಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ ಕ್ರಾಸ್ ಬಳಿ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮಧುರಾ ಮತ್ತು ಕರೆಪ್ಪ ದಂಪತಿ ಮದುವೆಯಾಗಿ 9 ವರ್ಷ ಆಗಿತ್ತು. ಇವರಿಗೆ ಒಂದು ಹೆಣ್ಣು, ಎರಡು ಗಂಡು ಮಕ್ಕಳಿದ್ದಾರೆ. ಈಗ ಒಂದೇ ದಿನ ತಂದೆ-ತಾಯಿಯನ್ನು ಕಳೆದುಕೊಂಡು ಮೂವರು ಮಕ್ಕಳು ಅನಾಥರಾಗಿದ್ದಾರೆ. ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ದುರ್ಮರಣ

