Districts
ಅಕ್ರಮ ಮದ್ಯ ಮಾರಾಟಗಾರನ ಬಂಧನಕ್ಕೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

ಹಾವೇರಿ: ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲೆಯ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದ ಮಹಿಳೆಯರು ಭಾನುವಾರ ರಾತ್ರಿ ಆಡೂರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮದ ಜನರು ಭಾನುವಾರ ಸಂಜೆ ಹಿಡಿದು ಆಡೂರು ಠಾಣಾ ಪೊಲೀಸರಿಗೆ ಒಪ್ಪಿಸಿದ್ದರು. ಆದರೆ ಪೊಲೀಸರು ವ್ಯಕ್ತಿಯ ವಿರುದ್ಧ ಕ್ರಮಕೈಗೊಳ್ಳದೇ ಅವನನ್ನು ಕಳುಹಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಕೆಲವರಕೊಪ್ಪ ಗ್ರಾಮದ ಮಹಿಳೆಯರು ಠಾಣೆಯ ಮುಂದೆಯೇ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
