ಇಂದು (ಮೇ 30) ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.
ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಎದುರೇ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಕಮಲ್ ಹಾಸನ್ ಹೇಳಿಕೆ ಶುದ್ಧ ಸುಳ್ಳು. ಭಾಷಾ ಪ್ರಾವಿಣ್ಯತೆ ಇಲ್ಲದೇ ಈ ರೀತಿಯ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಭಾಷಾ ವಿಜ್ಞಾನಿಗಳು ಖಂಡಿಸಿದ್ದಾರೆ. ನಟನ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೂಡಲೇ ಕನ್ನಡಿಗರ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು ಎಂದು ಹೋರಾಟಗಾರರು ನಟನಿಗೆ ಎಚ್ಚರಿಕೆ ನೀಡಿದ್ದಾರೆ.