ಬೆಂಗಳೂರು: ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಶತಕಗಳ ದಾಖಲೆ ಸರಿಗಟ್ಟಿದ್ದ ವಿರಾಟ್ ಕೊಹ್ಲಿ (Virat Kohli), ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ರೂ ಸಚಿನ್ (Sachin Tendulkar) ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನ ಸರಿಗಟ್ಟಿದ್ದಾರೆ.
ಲೀಗ್ ಸುತ್ತಿನ ಕೊನೆಯ ಪಂದ್ಯವು ಟೀಂ ಇಂಡಿಯಾ (Team India) ಅಭಿಮಾನಿಗಳ ಪಾಲಿಗೆ ರಸದೌತಣವಾಗಿತ್ತು. ಟಾಸ್ ಗೆದ್ದು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ ಬ್ಯಾಟರ್ಸ್, ನೆದರ್ಲೆಂಡ್ಸ್ ಬೌಲರ್‌ಗಳನ್ನ ಹಿಗ್ಗಾಮುಗ್ಗಾ ಚೆಂಡಾಡಿದರು. ಅದರಲ್ಲೂ ಚೇಸ್ ಮಾಸ್ಟರ್ ಖ್ಯಾತಿಯ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವದಾಖಲೆ ಮುರಿಯುತ್ತಾರೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದರು. ಆದ್ರೆ ಕೊಹ್ಲಿ ಅರ್ಧಶತಕ ದಾಖಲಿಸಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಡಚ್ಚರ ವಿರುದ್ಧ ಅರ್ಧಶತಕ ಸಿಡಿಸಿದ ಕೊಹ್ಲಿ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ 7 ಬಾರಿ 50+ ರನ್ ಗಳಿಸಿದ ವಿಶೇಷ ಸಾಧನೆ ಮಾಡಿದರು. ಇದರೊಂದಿಗೆ ಈ ಸಾಧನೆ ಮಾಡಿದ್ದ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಸರಿಗಟ್ಟಿದರು. 2003ರಲ್ಲಿ ಸಚಿನ್ ತೆಂಡೂಲ್ಕರ್ 7 ಬಾರಿ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ 50+ ಸ್ಕೋರ್ ಗಳಿಸಿದ್ದರೆ, ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ (Shakib Al Hasan) 2019ರಲ್ಲಿ ಈ ಸಾಧನೆ ಮಾಡಿದ್ದರು. ಕೊಹ್ಲಿ 2023ರ ವಿಶ್ವಕಪ್ ಆವೃತ್ತಿಯಲ್ಲಿ ಇವರಿಬ್ಬರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಬಾರಿಸಿತ್ತು. ಈ ಗುರಿ ಬೆನ್ನತ್ತಿದ್ದ ನೆದರ್ಲೆಂಡ್ಸ್ (Netherlands) 47.5 ಓವರ್‌ಗಳಲ್ಲೇ 250 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ 2023ರ ವಿಶ್ವಕಪ್‌ಗೆ ಸೋಲಿನೊಂದಿಗೆ ಭಾವುಕ ವಿದಾಯ ಹೇಳಿತು.
ಭಾನುವಾರದ ಪಂದ್ಯವು ಟೀಂ ಇಂಡಿಯಾದ ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು. 2023ನೇ ಸಾಲಿನಲ್ಲಿ ಭಾರತ 8 ಬಾರಿ 350ಕ್ಕಿಂತ ಹೆಚ್ಚು ರನ್ ಗಳಿಸಿ ದಾಖಲೆ ಬರೆಯಿತು. ಅಲ್ಲದೇ ಇದು ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯಲ್ಲಿ ಗಳಿಸಿದ 2ನೇ ಗರಿಷ್ಠ ಸ್ಕೋರ್ (2nd Highest World Cup Score in History) ಸಹ ಆಗಿದೆ. 2007ರ ವಿಶ್ವಕಪ್‌ನಲ್ಲಿ ಭಾರತ ಬರ್ಮುಡಾ ವಿರುದ್ಧ 5 ವಿಕೆಟ್ ನಷ್ಟಕ್ಕೆ 413 ರನ್ ಗಳಿಸಿದ್ದು, ವಿಶ್ವಕಪ್‌ನಲ್ಲಿ ಗರಿಷ್ಠ ಸ್ಕೋರ್ ಆಗಿದೆ. ಅಷ್ಟೇ ಅಲ್ಲದೇ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿಯೇ ಆರಂಭಿಕನಾಗಿಯೇ 14 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು. ಒಟ್ಟು 60 ಸಿಕ್ಸರ್ ಸಿಡಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ನಂ.1 ಆಟಗಾರ ಸಹ ಎನಿಸಿಕೊಂಡರು. ಅಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನ ಪೂರೈಸಿದರು. ಇನ್ನೂ ಕೆ.ಎಲ್ ರಾಹುಲ್ 62 ಎಸೆತಗಳಲ್ಲೇ ಶತಕ ಸಿಡಿಸಿ ವೇಗದ ಶತಕ ಸಿಡಿಸಿದ ಟಾಪ್-1 ದಿಗ್ಗಜರ ಎಲೈಟ್ ಪಟ್ಟಿ ಸೇರಿದರು.