ಯಾದಗಿರಿ: ನಗರದ ಪೊಲೀಸ್ ಆಡಳಿತ ಭವನದಲ್ಲಿ ಜಿಲ್ಲೆಯ ಎಲ್ಲಾ ಠಾಣೆಗಳ ಸಿಪಿಐ ಮತ್ತು ಪಿಎಸ್‍ಐ ಅಧಿಕಾರಿಗಳಿಗೆ, 1986ರ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ನಿಷೇಧಿತ ತಂಬಾಕು ಕುರಿತು ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು.
ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ್ ಮತ್ತು ಡಿವೈಎಸ್‍ಪಿ ಶರಣಪ್ಪ ಅವರು ಪೊಲೀಸ್ ಅಧಿಕಾರಿಗಳಿಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ ವಿಷಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಜಿಲ್ಲಾದ್ಯಂತ ಅನಿರೀಕ್ಷಿತ ತಪಾಸಣೆ ಕೈಗೊಂಡು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಮಾಲೀಕರುಗಳಿಗೆ ಸೂಚನೆ ನೀಡಬೇಕು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದ್ದಲ್ಲಿ ಮಾಲೀಕರುಗಳಿಗೆ ಪ್ರತಿ ಬಾಲ ಕಾರ್ಮಿಕರಿಂದ 50,000 ರೂಪಾಯಿ ದಂಡ ವಿಧಿಸಿ, ಜೈಲು ಶಿಕ್ಷೆ ಕೂಡ ವಿಧಿಸಬಹುದಾದ ಕಾನೂನಿನ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.
Advertisement
Advertisement
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ ಕಾರ್ಮಿಕ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟ ಠಾಣೆಗಳ ಕಾರ್ಯವ್ಯಾಪ್ತಿಯಲ್ಲಿ ಅನಿರೀಕ್ಷಿತ ದಾಳಿ ಅಥವಾ ತಪಾಸಣೆಯನ್ನು ಕೈಗೊಳ್ಳಬೇಕು. ಮಕ್ಕಳನ್ನು ರಕ್ಷಿಸಿ, ಪುನರ್ವಸತಿ ನೀಡುವ ಮೂಲಕ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕು. ಈ ಮೂಲಕ ಯಾದಗಿರಿ ಜಿಲ್ಲೆಯನ್ನು ಬಾಲ ಕಾರ್ಮಿಕ ಪದ್ಧತಿಯಿಂದ ವಿಮುಕ್ತಿಗೊಳಿಸಬೇಕು ಎಂಬ ನಿರ್ಣಯವನ್ನು ಈ ಕಾರ್ಯಾಗಾರದಲ್ಲಿ ಪೊಲೀಸ್ ಅಧಿಕಾರಿಗಳು ಕೈಗೊಂಡರು.