ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಭೇಟಿಯಾಗಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಸಲ್ಲಿಸಿದರು.
ಜಿಲ್ಲೆಯ ಜನತೆಯ ಬಹುಕಾಲದ ಕನಸಾದ ಜಿಲ್ಲಾಸ್ಪತ್ರೆಯ ನಿರ್ಮಾಣ ಕಾಮಗಾರಿಯನ್ನು 2021ರ ಡಿಸೆಂಬರ್‌ನಲ್ಲಿ ಪ್ರಾರಂಭಿಸಲಾಗಿದ್ದು, ಪ್ರಸ್ತುತ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ. ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಮತ್ತು ಚಿಕಿತ್ಸೆಗಳನ್ನು ಒಳಗೊಂಡಂತೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ 250 ಹಾಸಿಗೆಗಳ ಸೌಕರ್ಯಗಳನ್ನೊಳಗೊಂಡ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಆರೋಗ್ಯ ಸೇವೆಗಾಗಿ ಶೀಘ್ರವಾಗಿ ಲೋಕಾರ್ಪಣೆಗೊಳಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರವು ನೂತನ ತಾಲೂಕಾಗಿ ರಚನೆಯಾಗಿ ಸುಮಾರು ಎಂಟು ವರ್ಷಗಳು ಕಳೆದಿದ್ದು, ತಾಲೂಕು ಕೇಂದ್ರವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಬ್ರಹ್ಮಾವರ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳ ಜನರಿಗೆ ಪ್ರಮುಖ ಆರೋಗ್ಯ ಸೇವೆ ಒದಗಿಸುತ್ತಿದೆ. ತಾಲೂಕಿನ ಜನರಿಗೆ ಸಮಗ್ರ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿಯೇ ಒದಗಿಸುವ ನಿಟ್ಟಿನಲ್ಲಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ, ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಹಾಗೂ ಕೂಸಮ್ಮ ಶಂಭು ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಬಿ.ಆರ್.ಶೆಟ್ಟಿ ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಉದ್ದೇಶಕ್ಕೆ ಭೂಮಿಯ ಕೆಲಸ ಪ್ರಾರಂಭಿಸಿ ಕಟ್ಟಡದ ಪಾರ್ಕಿಂಗ್ ಉದ್ದೇಶಕ್ಕೆ ಸುಮಾರು 30 ಅಡಿಗಳಿಗೂ ಹೆಚ್ಚು ಅಗೆತ ಮಾಡಿರುವ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ಮತ್ತು ಸರ್ಕಾರಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸುವಂತೆ ಸಚಿವರಿಗೆ ಕೋರಿದರು. ಶಾಸಕ ಯಶ್‌ಪಾಲ್ ಸುವರ್ಣ ಅವರ ಮನವಿಗೆ ಸ್ಪಂದಿಸಿದ ಸಚಿವ ಯು.ಟಿ.ಖಾದರ್ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.

