ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವ ಯಶವಂತ್ ಸಿನ್ಹಾ ಅವರು ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಮತ್ತು ವಿಶಿಷ್ಟವಾದ ವೃತ್ತಿ ಜೀವನದಲ್ಲಿ ಸಿನ್ಹಾ ಅವರು ಸಮರ್ಥ ಆಡಳಿತಗಾರರಾಗಿ, ನಿಪುಣ ಸಂಸದರಾಗಿ ಮತ್ತು ಹಣಕಾಸು, ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮೆಚ್ಚುಗೆ ಪಡೆದಿದ್ದಾರೆ. ಕೇಂದ್ರ ಸಚಿವರಾಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಭಾರತೀಯ ಗಣರಾಜ್ಯದ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಸ್ವರೂಪ ಮತ್ತು ಅದರ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅರ್ಹರಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement
ಮೋದಿ ಸರ್ಕಾರವು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಸಂಬಂಧ ಯಾವುದೇ ಗಂಭೀರ ಪ್ರಯತ್ನ ಮಾಡದಿರುವುದಕ್ಕೆ ನಾವು ವಿಷಾದಿಸುತ್ತೇವೆ. ಆದ್ದರಿಂದ ನಾವು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಸಿನ್ಹಾ ಅವರ ಉಮೇದುವಾರಿಕೆಯನ್ನು ಬೆಂಬಲಿಸುವಂತೆ ಮನವಿ ಮಾಡುತ್ತೇವೆ. ಇದರಿಂದಾಗಿ ರಾಷ್ಟ್ರವು ಯೋಗ್ಯವಾದ ರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಬಹುದಾಗಿದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.
Advertisement
ಸಂಸತ್ ಭವನದಲ್ಲಿ ಎನ್‌ಸಿಪಿ ವರಿಷ್ಠ ಶರದ್ ಪವಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಪಕ್ಷಗಳಿಂದ ಒಮ್ಮತದಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಯಿತು.