ಹೈದರಾಬಾದ್: 24 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಾಜೇಂದ್ರನಗರದಲ್ಲಿ ನಡೆದಿದ್ದು, ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಲು ಸಾಧ್ಯವಾಗದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಸಾಯಿ(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಸೋಮವಾರ ರಾಜೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ತನ್ನ ನಿವಾಸದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಸಾಯಿ ಎಸ್‍ಎಸ್‍ಎಲ್‍ಸಿ ವರೆಗೂ ಶಿಕ್ಷಣ ಮಾಡಿದ್ದು, ಮುಂದಕ್ಕೆ ವಿದ್ಯಾಭ್ಯಾಸವನ್ನು ಮುಂದುವರಿಸದೇ ಅಂದಿನಿಂದಲೂ ಮನೆಯಲ್ಲಿಯೇ ಉಳಿದುಕೊಂಡಿದ್ದನು. ಆದರೆ ಸೋಮವಾರ ಸಂಜೆ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ರಾಜೇಂದ್ರನಗರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಬಂದು ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.
ಮೃತ ಸಾಯಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಭಾನುವಾರ ಆಕೆಗೆ ಬೇರೆ ಹುಡುಗನ ಜೊತೆ ಮದುವೆಯಾಯಿತು. ಆದ್ದರಿಂದ ಖಿನ್ನತೆಗೆ ಒಳಗಾಗಿದ್ದನು ಎಂದು ಸಾಯಿ ಸ್ನೇಹಿತರು ಪೊಲೀಸರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರೀತಿಯ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸದ್ಯಕ್ಕೆ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv