ಬೆಂಗಳೂರು: ಎಐಸಿಸಿ(AICC) ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಭಾಗವಹಿಸಿದ್ದ ಸಮಾವೇಶದ ಸ್ಥಳದಲ್ಲಿ ಶುದ್ಧೀಕರಣ ನಡೆಸಿದ ಹಾಗೂ ಅದನ್ನು ಸಮರ್ಥಿಸಿಕೊಂಡ ಆರೋಪದ ಮೇಲೆ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಮಹೇಂದ್ರ ಭಟ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ಜೀರೋ ಎಫ್‌ಐಆರ್ (Zero FIR) ದಾಖಲಾಗಿದೆ.
ಅಖಿಲ ಭಾರತ ಆದಿವಾಸಿ ಕಾಂಗ್ರೆಸ್‌ನ ಮಾಜಿ ಉಪಾಧ್ಯಕ್ಷ ಟಿ.ಆರ್. ರಾಮಪ್ಪ ನೀಡಿದ ಲಿಖಿತ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 196(1)(b), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಸೆಕ್ಷನ್ 3(1)(u), ಹಾಗೂ ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ (PCR Act) 1955ರ ಸೆಕ್ಷನ್ 7(1)(d), 7(1) ಮತ್ತು 7(c) ಅಡಿಯಲ್ಲಿ ಜೀರೋ ಎಫ್‌ಐಆರ್ ದಾಖಲಾಗಿದೆ.
2026ರ ಆಗಸ್ಟ್ 8ರಂದು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿ ಭಾಷಣ ಮಾಡಿದ್ದರು. ಈ ಸಮಾವೇಶ ಮುಗಿದ ನಂತರ, ಆಗಸ್ಟ್ 10ರಂದು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಆ ಜಾಗದಲ್ಲಿ ಶುದ್ಧೀಕರಣ ಪೂಜೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಧಾರ್ಮಿಕ ಆಚರಣೆಗೆ ಜಾತಿ ಬಣ್ಣ – ರಾಹುಲ್ ವಿರುದ್ಧ SC/ST ಕಾಯ್ದೆ ಅಡಿ ಕೇಸ್ ದಾಖಲು
ಈ ಕೃತ್ಯವನ್ನು ಉತ್ತರಾಖಂಡ ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಅವರು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದು, ದ್ವೇಷ ಹಾಗೂ ಜಾತಿ ತಾರತಮ್ಯವನ್ನು ಉತ್ತೇಜಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
