ಹಾಸನ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕಾಡಾನೆ ದಾಳಿಯಿಂದ ಬಲಿಯಾಗಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಬಳಿ ಇಂದು ನಡೆದಿದೆ.
ತಮಿಳುನಾಡು ಮೂಲದ ಶಿವು (50) ಮೃತ ದುರ್ದೈವಿ. ಇಂದು ಬೆಳಗ್ಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.
ಇತ್ತ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಕಾಫಿ ತೋಟವೊಂದರಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ. ಮೀತಿಮೀರದ ಕಾಡಾನೆಗಳ ಹಾವಳಿಯಿಂದ ಈ ಭಾಗದ ರೈತರು ಕಂಗಾಲಾಗಿ ಹೋಗಿದ್ದಾರೆ.
ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಕಾಫಿ, ಬಾಳೆ, ಮೆಣಸು ಬೆಳೆ ನಾಶವಾಗಿದೆ. ಇನ್ನೊಂದೆಡೆ ಜೀವ ಭಯದಿಂದ ಕಾಫಿ ತೋಟಕ್ಕೆ ಕೆಲಸಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದರೆ ಮತ್ತೊಂದೆಡೆ ಕಾಫಿ ಬೆಳೆಗಾರರು ಹಾಗೂ ಅನ್ನದಾತರು ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ಅನಾಹುತ ಸಂಭವಿಸುವ ಮುನ್ನಾ ಆನೆಗಳನ್ನು ಕಾಡಿಗಟ್ಟುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.