ಮಡಿಕೇರಿ: ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಕೊಡಗು ಜಿಲ್ಲೆಯಲ್ಲಿ ಮತ್ತೆ ಚುರುಕುಗೊಂಡಿದೆ. ಜಿಲ್ಲೆಯಲ್ಲಿ ಇಂದಿನಿಂದ ಸೆಪ್ಟೆಂಬರ್ 13ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. 115 ಮಿ.ಮೀ ನಿಂದ 204.4 ಮಿ.ಮೀ ವರೆಗೂ ಮಳೆ ಸುರಿಯುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಧ್ಯಾಹ್ನದಿಂದಲೇ ಕೊಡಗಿನಲ್ಲಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಹವಾಮಾನ ಇಲಾಖೆ ಆಗಿಂದಾಗ್ಗೆ ಬಿಡುಗಡೆ ಮಾಡುವ ಮುನ್ಸೂಚನೆಗಳನ್ನು ಗಮನಿಸಿ ಎಚ್ಚರವಹಿಸುವಂತೆ ತಿಳಿಸಿದೆ.
Advertisement
ಈಗಾಗಲೇ ಆಗಸ್ಟ್ 5 ರಿಂದ ಕೊಡಗು ಜಿಲ್ಲೆಯಲ್ಲಿ ಎದುರಾಗಿದ್ದ ಭೀಕರ ಭೂಕುಸಿತ ಮತ್ತು ಪ್ರವಾಹದಿಂದ ಜನರಿಗೆ ಇನ್ನು ಆತಂಕ ದೂರವಾಗಿಲ್ಲ. ಇದರ ನಡುವೆಯೇ ಜಿಲ್ಲೆಯಲ್ಲಿ ಮತ್ತೆ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಮಾಡಿರುವುದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.