ಬೆಂಗಳೂರು: ಕೊರೊನಾ ವಿರುದ್ಧ ನಡೆಯುತ್ತಿದ್ದ ಯುದ್ಧದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ಪೌರಕಾರ್ಮಿಕರು, ಪೊಲೀಸರು, ಮಾಧ್ಯಮಗಳು ನಿರಂತರವಾಗಿ ದುಡಿಯುತ್ತಿದ್ದು, ಸದ್ಯ ಈ ಪಟ್ಟಿಗೆ ಸಾರಿಗೆ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇರ್ಪಡೆ ಮಾಡಿದೆ. ರಾಜ್ಯ ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು, ನಿರ್ವಾಹಕರು ಮೃತಪಟ್ಟರೆ ಕುಟುಂಬಸ್ಥರಿಗೆ 30 ಲಕ್ಷ ಪರಿಹಾರ ನೀಡುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಈ ಕುರಿತು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿ ಮಾಹಿತಿ ನೀಡಿದ್ದು, ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಮೇಲಿದ್ದಾಗ ಕೋವಿಡ್-19 ಪಿಡುಗಿಗೆ ತುತ್ತಾಗಿ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 30 ಲಕ್ಷ ರೂಪಾಯಿಗಳನ್ನು ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
Advertisement
Advertisement
ಈ ಪರಿಹಾರವನ್ನು ಸಾರಿಗೆ ಇಲಾಖೆಯಿಂದ ನೀಡಲು ನಿರ್ಧರಿಸಲಾಗಿದೆ. ಮೇ 19 ರಿಂದ ಸಾರಿಗೆ ಸಂಸ್ಥೆಗಳ ಬಸ್ಸುಗಳು ಕಾರ್ಯನಿರ್ವಹಿಸಲಿದ್ದು, ಈ ಸಂದರ್ಭದಲ್ಲಿ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ಒದಗಿಸಲು ಕ್ರಮಕೈಗೊಳ್ಳಾಗಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾರಿಗೆ ಸಂಸ್ಥೆಗಳ ಎಲ್ಲಾ ಚಾಲಕರು, ನಿರ್ವಾಹಕರು ಮತ್ತು ಸಿಬ್ಬಂದಿಗಳು ಗಮನಹರಿಸುವ ಮೂಲಕ ಕೋವಿಡ್-19 ರೋಗವನ್ನು ತಡಗಟ್ಟಲು ಸಹಕರಿಸಬೇಕೆಂದು ಸಚಿವ ಲಕ್ಷ್ಮಣ ಸವದಿ ಅವರು ಮನವಿ ಮಾಡಿಕೊಂಡಿದ್ದಾರೆ.
Advertisement
ಪ್ರಯಾಣಿಕರು ಕೂಡ ಬಸ್ಸುಗಳಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಈ ಮುಂತಾದ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ.