ಬೆಂಗಳೂರು: ಮಂಗಳೂರಿನ ಗುರುಪುರದ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದು, ಮಕ್ಕಳ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಂತಾಪ ಸೂಚಿಸಿ ಇಬ್ಬರು ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ದುಃಖಕರ. ರಕ್ಷಣಾ ಕಾರ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳು ಭಾಗಿಯಾಗಿದ್ದರು. ಜಿಲ್ಲಾಡಳಿತದ ಸಕಾಲಿಕ ಪ್ರಯತ್ನದ ಹೊರತಾಗಿಯೂ ಮಕ್ಕಳನ್ನು ಬದುಕಿಸಿಕೊಳ್ಳಲು ಸಾಧ್ಯವಾಗದಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು: ಮುಖ್ಯಮಂತ್ರಿಯವರ ಸಂತಾಪ, ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ; ಸಂತ್ರಸ್ತರ ಸ್ಥಳಾಂತರಕ್ಕೆ ಸೂಚನೆ.#MangaloreLandslideIncident@BSYBJP pic.twitter.com/uTZ8TL47xD
— CM of Karnataka (@CMofKarnataka) July 5, 2020
Advertisement
ಈಗಾಗಲೇ 19 ಮನೆಗಳಿಂದ 118 ಮಂದಿಯನ್ನು ತೆರವುಗೊಳಿಸಿ, ಸ್ಥಳಾಂತರಿಸಲಾಗಿದೆ. ಉಳಿದ 60 ಮನೆಗಳಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಬೋಂಡಂತಿಲ ಗ್ರಾಮದ ಬಳಿ ಗುರುತಿಸಿರುವ ಜಾಗದಲ್ಲಿ ಮನೆಗಳನ್ನು ನಿರ್ಮಿಸಿ ಎಲ್ಲ ಸಂತ್ರಸ್ತರನ್ನು ಸ್ಥಳಾಂತರಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಿಎಂ ಟ್ವೀಟ್ನಲ್ಲಿ ತಿಳಿಸಿದ್ದಾರೆ.
Advertisement
ಮಂಗಳೂರು ಹೊರವಲಯದ ಗುರುಪುರ ಬಳಿ ಗುಡ್ಡ ಕುಸಿತದಿಂದಾಗಿ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಸತತ ಐದು ಗಂಟೆಯಿಂದ ಎನ್ಡಿಆರ್ಎಫ್ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. 16 ವರ್ಷದ ಅಣ್ಣ ಸಫ್ವಾನ್ ಹಾಗೂ 10 ವರ್ಷದ ತಂಗಿ ಸಹಲಾ ಇಬ್ಬರ ಮೃತ ದೇಹವನ್ನು ಹೊರ ತೆಗೆಯಲಾಗಿದೆ.
Advertisement
ಈ ಮನೆಯಲ್ಲಿ ಸುಮಾರು 6 ಜನ ವಾಸವಿದ್ದರು. ಗುಡ್ಡ ಕುಸಿಯುತ್ತಿರುವುದು ತಿಳಿಯುತ್ತಿದ್ದಂತೆ ಮನೆಯವರು ಹೊರಗಡೆ ಓಡಿ ಬಂದಿದ್ದಾರೆ. ಆದರೆ ಇಬ್ಬರು ಮಕ್ಕಳು ಮನೆಯಲ್ಲಿ ಮಲಗಿದ್ದರು. ಹೀಗಾಗಿ ಮನೆಯಲ್ಲೇ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.