ಹೈದರಾಬಾದ್: ದೇಶದ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಶ್ರೀನಿವಾಸ ದೀಕ್ಷಿತಲು ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
73 ವರ್ಷದ ದೀಕ್ಷಿತಲು ಅವರನ್ನು ಅನಾರೋಗ್ಯದ ಸಮಸ್ಯೆಯಿಂದ ಗುರುವಾರ ತಿರುಪತಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.19ರ ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದೀಕ್ಷಿತಲು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಸಂದರ್ಭದಲ್ಲಿ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿ ಪಾಸಿಟಿವ್ ಎಂದು ದೃಢಪಟ್ಟಿತ್ತು.
Advertisement
Advertisement
ಕೊರೊನಾ ಆತಂಕದ ನಡುವೆಯೂ ತಿರುಮಲ ತಿರುಪತಿಯಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇದುವರೆಗೂ 140 ಮಂದಿ ಟಿಟಿಡಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಉಳಿದಂತೆ ಲಡ್ಡು ಮಾಡುವ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 14 ಮಂದಿ ಸಹಾಯಕ ಅರ್ಚಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 140 ಮಂದಿ ಸೋಂಕಿತರಲ್ಲಿ ಇದುವರೆಗೂ ಕೊರೊನಾಗೆ ಚಿಕಿತ್ಸೆ ಪಡೆದುಕೊಂಡು 70 ಮಂದಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಟಿಟಿಡಿ ಭಕ್ತರಿಗೆ ದರ್ಶನ ವ್ಯವಸ್ಥೆಯನ್ನು ಮುಂದುವರಿಸಿದ್ದು, ಪ್ರತಿದಿನ ಸುಮಾರು 12 ಸಾವಿರ ಮಂದಿ ದೇವರ ದರ್ಶನ ಪಡೆಯುತ್ತಿದ್ದಾರೆ. ಉಳಿದಂತೆ ಸಾವಿಗೂ ಮುನ್ನ ಸಾಮಾಜಿಕ ಜಾಲತಾಣದ ಮೂಲಕ ಆಂಧ್ರ ಪ್ರದೇಶ ಸಿಎಂ ಜಗನ ಮೋಹನ್ ರೆಡ್ಡಿ ಅವರನ್ನು ಪ್ರಶ್ನಿಸಿದ್ದ ಅರ್ಚಕರು, ತಿರುಮಲದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಸಂಖ್ಯೆ ಹೆಚ್ಚಳ ಕುರಿತು ಪ್ರಶ್ನಿಸಿ ದೇವರ ದರ್ಶನ ಬಂದ್ ಮಾಡಬೇಕು ಎಂದು ಹೇಳಿದ್ದರು. ಅಲ್ಲದೇ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿದ್ದರು.