ತಿರುವನಂತಪುರಂ: ಆಕಸ್ಮಿಕವಾಗಿ ನಾಣ್ಯವನ್ನು ನುಂಗಿ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಆದರೆ ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಅಲುವಾ ಬಳಿಯ ಕೊಡುಂಗಲ್ಲೂರ್ನಲ್ಲಿ ಬಾಲಕ ವಾಸಿಸುತ್ತಿದ್ದನು. ಆದರೆ ಕೋವಿಡ್ 19 ನಿಂದಾಗಿ ಬಾಲಕ ವಾಸಿಸುತ್ತಿದ್ದ ಮನೆ ಕಂಟೈನ್ಮೆಂಟ್ ವಲಯದಲ್ಲಿತ್ತು. ಹೀಗಾಗಿ ಕಂಟೈನ್ಮೆಂಟ್ ವಲಯದಿಂದ ಬಂದಿದ್ದರಿಂದ ಆಸ್ಪತ್ರೆಯಲ್ಲಿ ಬಾಲಕನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. ಆದ್ದರಿಂದ ಚಿಕಿತ್ಸೆ ಸಿಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
Advertisement
Advertisement
ಶನಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾಲಕ ನಾಣ್ಯವನ್ನು ನುಂಗಿದ್ದಾನೆ. ಸ್ವಲ್ಪ ಸಮಯದ ನಂತರ ಬಾಲಕ ಅಸ್ವಸ್ಥನಾಗಿದ್ದಾನೆ. ತಕ್ಷಣ ಪೋಷಕರು ಮಗುವನ್ನು ಅಲುವಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಎಕ್ಸ ರೇ ಮಾಡಿದ್ದು, ನಾಣ್ಯವಿರುವ ಬಗ್ಗೆ ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ.
Advertisement
ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಮಕ್ಕಳ ಶಸ್ತ್ರಚಿಕಿತ್ಸಕರಿಲ್ಲದ ಕಾರಣ ಬಾಲಕನನ್ನು ದಾಖಲಿಸಿಕೊಂಡಿಲ್ಲ. ಆದ್ದರಿಂದ ಬಾಲಕನನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿನ ವೈದ್ಯರು ಮಗುವನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲೆಪ್ಪಿಯದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದ್ದಾರೆ. ಅಲ್ಲಿಯೂ ಬಾಲಕನ್ನು ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದ್ದರು ಎಂದು ಸಂಬಂಧಿಕರು ಆರೋಪಿಸಿದ್ದಾರೆ.
Advertisement
ವೈದ್ಯರು ಮಗುವಿಗೆ ಹಣ್ಣುಗಳನ್ನು ನೀಡುವಂತೆ ಪೋಷಕರಿಗೆ ಸಲಹೆ ನೀಡಿದ್ದಾರೆ. ಕೊನೆಗೆ ಪೋಷಕರು ಮಗುವನ್ನು ಮತ್ತೆ ತಮ್ಮ ಮನೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಸಂಜೆಯ ವೇಳೆಗೆ ಬಾಲಕನ ಸ್ಥಿತಿ ಗಂಭೀರವಾಗಿದೆ. ಇದರಿಂದ ಗಾಬರಿಯಾದ ಪೋಷಕರು ಮತ್ತೆ ಅಲುವಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಮಾರ್ಗದಲ್ಲಿಯೇ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುವುದು. ಕೋವಿಡ್ ಟೆಸ್ಟ್ಗೆ ಬಾಲಕನಿಂದ ಸ್ವ್ಯಾಬ್ ಸಂಗ್ರಹಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ತಿಳಿದು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಕೆ.ಕೆ. ಶೈಲಜಾ. “ನಾಣ್ಯ ನುಂಗಿ ಬಾಲಕ ಮೃತಪಟ್ಟ ಘಟನೆ ಅತ್ಯಂತ ದುರದೃಷ್ಟಕರ ಎಂದು ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಈ ಪ್ರಕರಣ ಕುರಿತು ಸಮಗ್ರ ವಿಚಾರಣೆಯ ನಂತರ ವರದಿಯನ್ನು ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ಜೊತೆಗೆ ಸಂಬಂಧಿಕರು ಮಾಡುತ್ತಿರುವ ಆರೋಪ ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.