ಮಡಿಕೇರಿ: ರಾಜ್ಯಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಸಹ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇಷ್ಟಾದರೂ ಜನ ಮಾತ್ರ ಎಚ್ಚೆತ್ತುಕೊಂಡಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಕೊರೊನಾ ನಿಯಮ ಪಾಲಿಸದಿದ್ದರೆ ಜೈಲೇ ಗತಿ ಎಂದು ಎಸ್ಪಿ ಕ್ಷಮಾ ಮಿಶ್ರಾ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ಇನ್ನು ಮುಂದೆ ಜೈಲೇ ಗತಿ. ಮಾಸ್ಕ್ ಹಾಕದಿದ್ದರೆ ಸಾಮಾಜಿಕ ಅಂತರ ಕಾಪಾಡದಿದ್ದರೆ ಜೈಲು ವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
Advertisement
Advertisement
ಈಗಾಗಲೇ ಕೋವಿಡ್ ನಿಯಮ ಉಲ್ಲಂಘಿಸಿದ 11 ಜನರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ. ಅಷ್ಟೇ ಅಲ್ಲದೆ ಈ 11 ಜನರ ಮೇಲೆ ಜಾಮೀನು ರಹಿತ ಕೇಸ್ ದಾಖಲು ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ ಅಂಗಡಿ ಮಾಲೀಕರ ಮೇಲೆ ಎಫ್ಐಆರ್ ದಾಖಲಾಗಿದೆ. ನ್ಯಾಯಾಲಯಕ್ಕೆ ಹಾಜರು ಪಡಿಸಿಸಲಾಗಿದ್ದು, ಕೊಡಗಿನ ಕುಶಾಲನಗರದಲ್ಲಿ 9 ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ತಲಾ ಒಂದು ಕೇಸ್ ದಾಖಲು ಮಾಡಲಾಗಿದೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚು ಕೇಸ್ ದಾಖಲಿಸಲಾಗುವುದು ಎಂದು ಖಡಕ್ ವಾರ್ನ್ ಮಾಡಿದ್ದಾರೆ.
Advertisement
Advertisement
ಮಾಸ್ಕ್, ಸಾಮಾಜಿಕ ಅಂತರ ಪಾಲಿಸದೆ ಎಲ್ಲೆಂದರಲ್ಲಿ ಜನ ಸೇರುವುದು, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇನ್ನೊಂದೆಡೆ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿತ್ಯ ನೂರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಅಲ್ಲದೆ ಇಂದು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ 183 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಷ್ಟಾದರೂ ಜನ ಎಚ್ಚೆತ್ತುಕೊಂಡಿಲ್ಲ, ಹೀಗಾಗಿ ಕಠಿಣ ಕ್ರಮ ಅಗತ್ಯವಾಗಿದೆ ಎಂದರು.